ಸಾಲಮನ್ನಾ ಮಾಡದಿದ್ದರೆ ರೈತರೇ ಸ್ವಯಂಪ್ರೇರಿತರಾಗಿ ಬಂದ್ ನಡೆಸಲಿದ್ದಾರೆ : ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--02
ಬೆಂಗಳೂರು,ಮೇ 26-ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡದಿದ್ದರೆ ರೈತರೇ ಸ್ವಯಂಪ್ರೇರಿತರಾಗಿ ಸೋಮವಾರ ಬಂದ್ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಂದ್‍ಗೆ ಕರೆ ನೀಡಿದೆ ಎನ್ನುವುದಕ್ಕಿಂತ ರೈತರೇ ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಇದಕ್ಕೆ ಪಕ್ಷ ಕೂಡ ಬೆಂಬಲ ನೀಡಲಿದೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಗೂ ಮುನ್ನ ಕುಮಾರಸ್ವಾಮಿ ಅವರೇ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದರು. ಈಗ ನಮ್ಮ ಪಕ್ಷ ಸಂಪೂರ್ಣ ಅಧಿಕಾರಕ್ಕೆ ಬಂದಿಲ್ಲ ಎಂಬ ಸಬೂಬು ಹೇಳುತ್ತಿದ್ದಾರೆ. ಇಂತಹ ದ್ವಂದ್ವ ನೀತಿ ಏಕೆ ಎಂದು ಪ್ರಶ್ನಿಸಿದರು. ರೈತರ ಸಾಲ ಮನ್ನಾ ಘೋಷಣೆಯಾಗುವವರೆಗೂ ಹೋರಾಟ ಮುಂದುವರೆಯಲಿದೆ. ಸದನದ ಒಳಗೂ ಮತ್ತು ಹೊರಗೂ ಬಿಜೆಪಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಹೋರಾಟ ನಡೆಸಲಿದೆ. ಸರ್ಕಾರ ಎಚ್ಚೆತ್ತುಕೊಳ್ಳುವವರೆಗೂ ನಾವು ಸುಮ್ಮನಿರುವುದಿಲ್ಲ ಎಂದು ಯಡಿಯೂರಪ್ಪ ಎಚ್ಚರಿಸಿದ್ದಾರೆ.

ರಾಜರಾಜೇಶ್ವರಿನಗರ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಶತಸಿದ್ಧ. ಕಾಂಗ್ರೆಸ್ ಮತ್ತು ಜೆಡಿಎಸ್‍ನ ಅಪವಿತ್ರ ಮೈತ್ರಿ ವಿರೋಧಿಸಿ ಜನತೆ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಬಿಎಸ್‍ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin