ಭಿನ್ನಮತ ಶಮನಕ್ಕೆ ಕಾಂಗ್ರೆಸ್ ಹಿರಿಯ ನಾಯಕರ ಹರಸಾಹಸ

ಈ ಸುದ್ದಿಯನ್ನು ಶೇರ್ ಮಾಡಿ

Parameshwar

ಬೆಂಗಳೂರು, ಜೂ.7- ಸಂಪುಟ ರಚನೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಶಮನ ಮಾಡಲು ಹಿರಿಯ ನಾಯಕರು ಹರಸಾಹಸ ನಡೆಸುತ್ತಿದ್ದಾರೆ.ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತು ಅವರ ಬೆಂಬಲಿಗರು ತಮ್ಮ ತಮ್ಮ ಕ್ಷೇತ್ರಗಳಲ್ಲಿ, ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ನಿರಂತರ ಪ್ರತಿಭಟನೆಗಿಳಿದಿದ್ದಾರೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನಿವಾಸ ಹಾಗೂ ಕೆಪಿಸಿಸಿ ಕಾರ್ಯಾಲಯ ಪ್ರತಿಭಟನೆಯ ಕೇಂದ್ರ ಸ್ಥಳಗಳಾಗಿದ್ದವು.

ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಳಿ ಆಗಮಿಸಿದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಬೆಂಬಲಿಗರು ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಗೆ ಅವಕಾಶ ನೀಡದೆ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.ಸಂಗಮೇಶ್ ಆವರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕಾಂಗ್ರೆಸ್‍ನಲ್ಲಿ ಹಿರಿಯ ಶಾಸಕರಾಗಿರುವ ಅವರಿಗೆ ಸಚಿವ ಸ್ಥಾನ ನೀಡದೆ ವಂಚಿಸಿರುವುದು ಸರಿಯಲ್ಲ ಎಂದು ಅಸಮಾಧಾನ ಸೂಚಿಸಿದರು.

ಅಸಮಾಧಾನಗೊಂಡಿದ್ದ ಕಾರ್ಯಕರ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜಕೀಯ ಹೊಂದಾಣಿಕೆಯಲ್ಲಿ ವ್ಯತ್ಯಾಸಗಳಾಗಿವೆ. ಆದರೆ, ಸಂಪುಟದಲ್ಲಿ ಸಚಿವ ಸ್ಥಾನಗಳು ಪೂರ್ತಿ ಭರ್ತಿಯಾಗಿಲ್ಲ. ಇನ್ನೂ 6 ಸ್ಥಾನಗಳು ಖಾಲಿ ಇವೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾಗಿ ಭರವಸೆ ನೀಡಿ ಅಸಮಾಧಾನವನ್ನು ಶಮನಗೊಳಿಸಿದರು.ಬಿ.ಕೆ.ಸಂಗಮೇಶ್ ಪರವಾಗಿ ಶಿವಮೊಗ್ಗದಿಂದ ಆಗಮಿಸಿದ ಸಾವಿರಾರು ಮಂದಿ ಕಾರ್ಯಕರ್ತರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಯತ್ನಿಸಿದರು. ಆದರೆ, ಪೊಲೀಸರು ಅವಕಾಶ ನೀಡದೆ ಅವರನ್ನು ತಡೆಯಲು ಮುಂದಾದಾಗ ಕಾರ್ಯಕರ್ತರು, ಅಭಿಮಾನಿಗಳು ಬ್ಯಾರಿಕೇಡ್‍ಗಳನ್ನು ತಳ್ಳಿಕೊಂಡೇ ಕಾವೇರಿ ನಿವಾಸದ ಪ್ರಮುಖ ದ್ವಾರದವರೆಗೂ ಹೋದರು. ಇದನ್ನು ಗಮನಿಸಿದ ಸಿದ್ದರಾಮಯ್ಯ ಅವರು ಕೆಲವು ಮುಖಂಡರನ್ನು ಒಳಗೆ ಕರೆದು ಮಾತುಕತೆ ನಡೆಸಿದರು. ಮತ್ತೊಂದೆಡೆ ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡಿರುವ ಎಂ.ಬಿ.ಪಾಟೀಲ್ ಬೆಂಬಲಿಗರು ಇಂದು ಸಿದ್ದರಾಮಯ್ಯ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಎಂ.ಬಿ.ಪಾಟೀಲ್ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ತಮಗೆ ಸಂಪುಟದಲ್ಲಿ ಅವಕಾಶ ಸಿಗದೇ ಇರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಣ್ಣೀರು ಹಾಕಿದ್ದನ್ನು ಕಂಡ ಕಾರ್ಯಕರ್ತರು ತಾಳ್ಮೆ ಕಳೆದುಕೊಂಡು ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅತ್ತ ಕೆಪಿಸಿಸಿ ಕಚೇರಿ ಎದುರು ಶಿವಾಜಿನಗರದ ಶಾಸಕ ರೋಷನ್ ಬೇಗ್, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಬೆಂಬಲಿಗರು ಸಚಿವ ಸ್ಥಾನಕ್ಕಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್‍ನ ಹಿರಿಯ ರಾಜಕಾರಣಿ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮೈತ್ರಿ ಸರ್ಕಾರದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಸನಾಧಾನಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸತತವಾಗಿ ಏಳು ಬಾರಿ ಶಾಸಕರಾಗಿ, ಕಳಂಕ ರಹಿತ ಆಡಳಿತ ನಡೆಸಿರುವ ಸಜ್ಜನ ರಾಜಕಾರಣಿ ರಾಮಲಿಂಗಾರೆಡ್ಡಿ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವುದು ನಿಷ್ಠಾವಂತರಿಗೆ ಮಾಡಿದ ಅವಮಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿ, ಕೂಡಲೇ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಪಕ್ಷದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ರಾಮಲಿಂಗಾರೆಡ್ಡಿ ಅವರನ್ನು ಸಂಪುಟಕ್ಕೆ ಕೂಡಲೇ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಮಾಜ ಮೇಯರ್ ಮಂಜುನಾಥರೆಡ್ಡಿ, ಕವಿಕ ಮಾಜಿ ಅಧ್ಯಕ್ಷ ಮನೋಹರ್, ಮುಖಂಡರಾದ ಜಿ.ಜನಾರ್ಧನ್, ಸಲೀಂ ಸೇರಿದಂತೆ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ನಾಲ್ಕು ದಶಕಗಳಿಂದ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸತತವಾಗಿ ಏಳು ಬಾರಿ ಗೆಲುವು ಸಾಧಿಸಿ ಬೆಂಗಳೂರು ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಉಸಂಘಟಿಸಿ ಸದೃಢಗೊಳಿಸುವಲ್ಲಿ ಯಶಸ್ವಿಯಾಗಿರುವ ಅವರನ್ನು ಕಡೆಗಣಿಸಿರುವುದು ಖಂಡನೀಯ. ಕೂಡಲೇ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿ ಸೂಕ್ತ ಸ್ಥಾನ ಮಾನ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇದೇ ವೇಳೆ ಶಿವಾಜಿನಗರ ಕ್ಷೇತ್ರದಿಂದ ಆಗಮಿಸಿದ ಹಲವಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ತಮ್ಮ ಅಸಮಾಧಾನ ಹೊರ ಹಾಕಿದರು.

Facebook Comments

Sri Raghav

Admin