ಇನ್ನೂ 3 ದಿನ ಕರಾವಳಿ ಮತ್ತು ಮಲೆನಾಡಿನಲ್ಲಿ ಸುರಿಯಲಿದೆ ಭಾರಿ ಮಳೆ..!

ಈ ಸುದ್ದಿಯನ್ನು ಶೇರ್ ಮಾಡಿ

Heavy-Rain--01

ಬೆಂಗಳೂರು, ಜೂ.8-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆ ಹಾಗೂ ಮೇಲ್ಮೈ ಸುಳಿಗಾಳಿಯಿಂದಾಗಿ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಗೋವಾ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರಿಂದ ರಾಜ್ಯ ಹಲವೆಡೆ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ.ನಿನ್ನೆಯಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸುಮಾರು 300 ಮಿಲಿಮೀಟರ್‍ನಷ್ಟು ಅಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸರಾಸರಿ 150 ಮಿಲಿ ಮೀಟರ್‍ನಷ್ಟು ಹೆಚ್ಚಿನ ಮಳೆಯಾಗಿದೆ. ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲೂ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಇನ್ನು ಮೂರು ದಿನಗಳ ಕಾಲ ರಾಜ್ಯದೆಲ್ಲೆಡೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ನಾಳೆಯೊಳಗಾಗಿ ನೈರುತ್ಯ ಮುಂಗಾರು ಇಡೀ ರಾಜ್ಯ ವ್ಯಾಪಿಸುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದರು.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತಂಪಾದ ಮೇಲ್ಮೈ ಗಾಳಿ ಬೀಸುತ್ತಿದೆ. ಆಗಾಗ್ಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಒಟ್ಟಾರೆ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.

Facebook Comments

Sri Raghav

Admin