ನಾಳೆ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ಸಮ್ಮಿಶ್ರ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaih--01

ಬೆಂಗಳೂರು, ಜೂ.13-ರಾಜ್ಯ ಸಮ್ಮಿಶ್ರ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆ ನಾಳೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಚಿತವಾಗಿರುವ ಸಮನ್ವಯ ಸಮಿತಿ ಸಭೆ ವಿಧಾನಸೌಧದಲ್ಲಿ ನಾಳೆ ಸಂಜೆ ನಡೆಯಲಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಬಾಕಿ ಉಳಿದಿರುವ ಸಚಿವ ಸ್ಥಾನಗಳ ಭರ್ತಿ ಮಾಡುವಿಕೆ, ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ, ಉಭಯ ಪಕ್ಷಗಳ ಪ್ರಣಾಳಿಕೆ ಭರವಸೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ನಾಳೆ ಮಹತ್ವದ ಸಭೆ ನಡೆಯಲಿದೆ.

ಸಮನ್ವಯ ಸಮಿತಿ ಸಭೆಯಲ್ಲಿ ಹೊಸದಾಗಿ ಮಂಡನೆಯಾಗಲಿರುವ ಬಜೆಟ್‍ನಲ್ಲಿ ಘೋಷಣೆಯಾಗಬೇಕಿರುವ ಪ್ರಮುಖ ಕಾರ್ಯಕ್ರಮಗಳ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಗಳಿವೆ.  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಸಮಿತಿ ಸದಸ್ಯರಾಗಿರುವ ಉಭಯ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ನಂತರ ಉಂಟಾಗಿರುವ ಉಭಯ ಪಕ್ಷಗಳ ನಡುವಿನ ಗೊಂದಲದ ಬಗ್ಗೆಯೂ ಚರ್ಚೆಯಾಗಲಿದೆ.

ಇತ್ತೀಚೆಗೆ ನಡೆದ ವಿಧಾನಪರಿಷತ್‍ನ ಚುನಾವಣಾ ಫಲಿತಾಂಶ, ಜಯನಗರ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಭಯಪಕ್ಷಗಳು ಚುನಾವಣಾಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

Facebook Comments

Sri Raghav

Admin