ಬಜೆಟ್ ಬಗ್ಗೆ ಸಿದ್ದರಾಮಯ್ಯನವರಿಗೆ ಯಾವುದೇ ಅಸಮಾಧಾನ ಇಲ್ಲವಂತೆ

ಈ ಸುದ್ದಿಯನ್ನು ಶೇರ್ ಮಾಡಿ

Parameshwar
ಬೆಂಗಳೂರು, ಜೂ.26-ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಲು ಮುಂದಾಗಿರುವ ಬಜೆಟ್ ಬಗ್ಗೆಯಾಗಲಿ, ಸಮ್ಮಿಶ್ರ ಸರ್ಕಾರದ ನಿರ್ಧಾರದ ಬಗ್ಗೆಯಾಗಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ರೀತಿಯ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದೇನೆ. ಈ ಸಂದರ್ಭದಲ್ಲಿ ಅವರು ಯಾವುದೇ ರೀತಿಯ ಅಸಮಾಧಾನ ವ್ಯಕ್ತಪಡಿಸಿಲ್ಲ. ನನ್ನ ಬಳಿ ಅವರು ಆ ರೀತಿ ಯಾವುದೇ ಮಾತುಗಳನ್ನಾಡಿಲ್ಲ ಎಂದು ಹೇಳಿದರು.

ನಾನು ಯಾರ ಮುಲಾಜಿನಲ್ಲೂ ಸರ್ಕಾರ ನಡೆಸುತ್ತಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲವೂ ಸೌಹಾರ್ದಯುತವಾಗಿ ನಡೆಯುತ್ತಿದೆ. ಕೆಲವು ಕಪೋಲಕಲ್ಪಿತ ವರದಿಗಳಾಗುತ್ತಿದೆ. ಅದಕ್ಕೆಲ್ಲ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಇತ್ತೀಚೆಗೆ ಧರ್ಮಸ್ಥಳದಲ್ಲಿ ಶಾಸಕರಾದ ಮುನಿರತ್ನ, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ ಮತ್ತಿತರರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ವೇಳೆ ಸಮ್ಮಿಶ್ರ ಸರ್ಕಾರದ ನಿಲುವುಗಳ ಬಗ್ಗೆ, ಕುಮಾರಸ್ವಾಮಿ ಬಜೆಟ್ ಮಂಡಿಸುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು. ಅದರ ಬೆನ್ನಲ್ಲೇ ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಆ ಸಂದರ್ಭದಲ್ಲೂ ಸಿದ್ದರಾಮಯ್ಯ ತಮ್ಮ ಅಸಮಾಧಾನ ಹೊರಹಾಕಿದ್ದರು ಎಂದು ಹೇಳಲಾಗಿತ್ತು. ಆದರೆ ಇಂದು ಎಲ್ಲ ಸುದ್ದಿಗಳನ್ನು ಅಲ್ಲಗಳೆದಿರುವ ಪರಮೇಶ್ವರ್ ಅವರು ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ ಎಲ್ಲವೂ ಸರಿ ಇದೆ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin