#Budget : ಪ್ಲಾಸ್ಟಿಕ್ಗೆ ಪರ್ಯಾಯ ಪ್ಯಾಕಿಂಗ್ ತಂತಜ್ಞಾನ ಅಭಿವೃದ್ಧಿ
ಬೆಂಗಳೂರು, ಜು.5-ಪ್ಲಾಸ್ಟಿಕ್ ಹೊರತುಪಡಿಸಿ ಜೈವಿಕವಾಗಿ ಕರಗುವ ವಸ್ತುಗಳನ್ನು ಬಳಸಿ ಪ್ಯಾಕಿಂಗ್ ಮಾಡುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ತರಬೇತಿ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಸಂಸ್ಥೆಯೊಂದನ್ನು ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಸಾಮಗ್ರಿಗಳ ಮಾರಾಟ ಮತ್ತು ಉತ್ಪಾದನೆಯನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಹೀಗಾಗಿ ಪರ್ಯಾಯ ಪ್ಯಾಕಿಂಗ್ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಹಾಸನದಲ್ಲಿ ಒಂದು ಶತಮಾನದ ಹಿಂದೆ ಸ್ಥಾಪನೆಗೊಂಡಿರುವ ಕರ್ನಾಟಕ ಇಂಪ್ಲಿಮೆಂಟ್ ಮ್ಯಾನ್ಯುಫ್ಯಾಕ್ಚರಿಂಗ್ ಕಂಪೆನಿಯಲ್ಲಿ (ಕಿಮ್ಕೋ) ಅಭಿವೃದ್ಧಿಗೆ 10 ಕೋಟಿ ರೂ.ಗಳನ್ನು ನೀಡಲಾಗುತ್ತಿದೆ.
ಕಿಮ್ಕೋ ಸಂಸ್ಥೆಯಲ್ಲಿ ಪ್ರಸ್ತುತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಯಾಗಾರ ನಡೆಯುತ್ತಿದೆ. ಸಾರ್ವಜನಿಕ ಉದ್ದಿಮೆಗಳ ಇಲಾಖೆಯಡಿ ಬಹಳ ವರ್ಷಗಳಿಂದ ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆಗಳ ಲಾಭಾಂಶವನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರಿ ಸ್ವಾಮ್ಯದ 2 ಕಂಪೆನಿಗಳನ್ನು ಷೇರು ಮಾರುಕಟ್ಟೆಯ ಲಿಸ್ಟೆಡ್ ಕಂಪೆನಿಗಳ ಪಟ್ಟಿಗೆ ಸೇರ್ಪಡಿಸಲಾಗುವುದು ಎಂದು ಹೇಳಿದರು.
ಪ್ಲಾಸ್ಟಿಕ್ ಉತ್ಪನ್ನಗಳಿಗೆ ತೆರಿಗೆ :
ಬೆಂಗಳೂರು, ಜು.5- ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರ ಪ್ಲಾಸ್ಟಿಕ್ ವಸ್ತುಗಳ ಮೇಲೆ ಶೇ.3ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಲು ಮುಂದಾಗಿದೆ. ಪ್ಲಾಸ್ಟಿಕ್ ವಸ್ತುಗಳಿಂದ ಮನುಷ್ಯರ ಮೇಲೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 2016ರಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಜಾರಿಗೆ ತಂದಿದೆ.
ಈ ನಿಯಮದನ್ವಯ ಪ್ಲಾಸ್ಟಿಕ್ ಉಪಯೋಗಿಸಿ ಪ್ಯಾಕಿಂಗ್ ಮಾಡುವ ಎಲ್ಲ ಉತ್ಪನ್ನಗಳ ಮೇಲೆ ಶುಲ್ಕ ವಿಧಿಸಬಹುದಾಗಿದೆ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೆಚ್ಚಾಗುತ್ತಿರುವ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಪ್ಲಾಸ್ಟಿಕ್ನಿಂದ ಪ್ಯಾಕ್ ಮಾಡಿದ ವಸ್ತುಗಳ ಮೇಲಿನ ಎಂಆರ್ಪಿ ಆಧಾರದಲ್ಲಿ ಶೇ.3ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಲು ಸರ್ಕಾರ ತೀರ್ಮಾನಿಸಿದೆ. ನಿರ್ವಹಣಾ ಶುಲ್ಕದಿಂದ ಬರುವ ಹಣವನ್ನು ಪ್ಲಾಸ್ಟಿಕ್ ಸಂಸ್ಕರಣೆಗಾಗಿ ಬಳಸಿ ಪರಿಸರ ಸಂರಕ್ಷಣೆ ಮಾಡಲಾಗುವುದು ಎಂದು ಬಜೆಟ್ ಪ್ರತಿಯಲ್ಲಿ ಹೇಳಲಾಗಿದೆ.