ಶಾಸಕರು, ಸಚಿವರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು..!

ಈ ಸುದ್ದಿಯನ್ನು ಶೇರ್ ಮಾಡಿ

Tratment

ಬೆಂಗಳೂರು, ಜು.14- ಮುಖ್ಯಮಂತ್ರಿ ಒಳಗೊಂಡಂತೆ ಸಚಿವರು, ಶಾಸಕರು ಹಾಗೂ ಎಲ್ಲಾ ಸಾರ್ವಜನಿಕ ಸೇವಕರು ತುರ್ತು ಸಂದರ್ಭ ಹೊರತುಪಡಿಸಿ ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಪಡೆಯಬೇಕಾಗಿದೆ. ಸರ್ಕಾರಿ ಆಸ್ಪತ್ರೆಗೆ ಹೋಗದೆ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ವಿಧಾನಸಭೆ ಸಚಿವಾಲಯ ಸ್ಪಷ್ಟಪಡಿಸಿದೆ.  ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಅವರ ಸೂಚನೆ ಮೇರೆಗೆ ಎಲ್ಲಾ ಶಾಸಕರು ಹಾಗೂ ಮಾಜಿ ಶಾಸಕರಿಗೆ ಈ ಸಂಬಂಧ ತಿಳುವಳಿಕೆ ನೀಡಲಾಗಿದೆ.

ಕರ್ನಾಟಕ ಖಾಸಗಿ ವೈದ್ಯಕೀಯ ಅಧಿನಿಯಮ (ತಿದ್ದುಪಡಿ) ವಿಧೇಯಕ-2017 ನಿಯಮಗಳೊಂದಿಗೆ ಕಳೆದ ಮಾ.27ರಿಂದ ಜಾರಿಗೆ ಬಂದಿದೆ. ಅದೇ ರೀತಿ ಕಳೆದ ಮಾ.1ರಿಂದ ಆರೋಗ್ಯ ಕರ್ನಾಟಕ ಯೋಜನೆಯು ಜಾರಿಗೆ ಬಂದಿದೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು, ಶಾಸಕರು, ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕ ಸೇವಕರು ಅಪಘಾತ, ಹೃದಯಾಘಾತ ಸೇರಿದಂತೆ ಸರ್ಕಾರಿ ಆದೇಶದಲ್ಲಿ ಉಲ್ಲೇಖಿಸಿರುವ ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಪಡೆಯಬೇಕು.

ಮೊದಲ ಆದ್ಯತೆ ಮೇರೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಾಗಿದೆ. ಒಂದು ವೇಳೆ ಅವಶ್ಯಕವಾಗಿರುವ ಚಿಕಿತ್ಸೆಯು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದ್ದರೆ ಸಂಬಂಧಿಸಿದ ಸರ್ಕಾರಿ ಆಸ್ಪತ್ರೆಯ ವೈದ್ಯರು ನೀಡಿದ ಸಲಹೆ ಆಧರಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಸಚಿವರು, ಶಾಸಕರು, ಮಾಜಿ ಶಾಸಕರು, ಸರ್ಕಾರಿ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ಹೋಗದೆ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಂತಹ ವೈದ್ಯಕೀಯ ವೆಚ್ಚವನ್ನು ಕಾನೂನು ಹಾಗೂ ನಿಯಮಾವಳಿಗಳ ಪ್ರಕಾರ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments

Sri Raghav

Admin