ಸಿಡಬ್ಲ್ಯೂಸಿ ಸಭೆ : ಲೋಕಸಭಾ ಚುನಾವಣೆಗೆ ಪ್ರಾದೇಶಿಕ ಪಕ್ಷಗಳೊಂದಿಗೆ ಕಾಂಗ್ರೆಸ್ ಮೈತ್ರಿ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Congress-Meet-Rahul

ನವದೆಹಲಿ, ಆ.4-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನವದೆಹಲಿಯಲ್ಲಿಂದು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಆರಂಭಗೊಂಡಿದೆ. ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ 2ನೇ ಸಭೆ ಇದಾಗಿದ್ದು, ಮುಂದಿನ ಪ್ರಧಾನಿ ಹುದ್ದೆ ಯಿಂದ ಹಿಂದೆ ಸರಿದು ಆರ್‍ಎಸ್‍ಎಸ್ ಅಲ್ಲದ ವ್ಯಕ್ತಿಗೆ ಬೆಂಬಲ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಹಾಗೂ ಅದರ ಸಾಧಕ-ಬಾಧಕಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ.

ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧಿಸಿದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬಹುದು. ಆದರೆ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸಿದರೆ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಅವರನ್ನು ಒಪ್ಪಿಕೊಳ್ಳಲು ಇತರ ಪಕ್ಷಗಳು ಸಿದ್ಧವಿರಲಾರವು. ಆದ್ದರಿಂದ ಪ್ರಾದೇಶಿಕ ಪಕ್ಷಗಳ ಸಮರ್ಥ ನಾಯಕರೊಬ್ಬರನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ.

ಅಸ್ಸಾಂನಲ್ಲಿ ಉಂಟಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ವಿವಾದದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಈ ವಿಷಯದಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬೆಂಬಲ ನೀಡುವುದು ಹಾಗೂ ಈ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಫೇಲ್ ಯುದ್ಧ ವಿಮಾನ ವಿವಾದದಲ್ಲಿ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಕೈಗೊಳ್ಳಬೇಕಾದ ತಂತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸಿಡಬ್ಲ್ಯುಸಿ ಸದಸ್ಯರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎ.ಕೆ.ಆಂಟನಿ, ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲಾ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ.

Facebook Comments