ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ..!

ಈ ಸುದ್ದಿಯನ್ನು ಶೇರ್ ಮಾಡಿ

BJP-Yadioyurappa

ಮೈಸೂರು, ಆ.5- ಸ್ಥಳೀಯ ಸಂಸ್ಥೆಗಳ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಪಕ್ಷವನ್ನು ಸಂಘಟಿಸುವ ಕಾರ್ಯ ಮಾಡಿ ಗೆಲುವಿಗೆ ತಂತ್ರ ರೂಪಿಸುತ್ತೇವೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ತಲೆ ಕೆಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಗೆಲುವು ಸಾಧಿಸಲು ಮೂರು ತಂಡಗಳನ್ನು ರಚಿಸ ಲಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಇದೇ 9ರಂದು ನಮ್ಮ ಪಕ್ಷದ ಎಲ್ಲ ಶಾಸಕರನ್ನು ಕರೆದು ಚರ್ಚಿಸಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಯಾವುದೇ ಸಾಲಮನ್ನಾ ಮಾಡಿಲ್ಲ. ಬರೀ ಘೋಷಣೆಗಷ್ಟೇ ಸೀಮಿತವಾಗಿದ್ದಾರೆ. ರೈತರ ಸಾಲಮನ್ನಾ ಮಾಡುವಂತೆ ಯಾವುದೇ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಸ್ಪಷ್ಟ ನಿರ್ದೇಶನ ನೀಡಿಲ್ಲ. ಇದನ್ನೆಲ್ಲ ನೋಡಿದರೆ ಮುಖ್ಯಮಂತ್ರಿಗೆ ರೈತರ ಮೇಲೆ ಎಷ್ಟು ಕಾಳಜಿ ಇದೆ ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದರು. ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಯಡಿಯೂರಪ್ಪ ಪ್ರತಿಸ್ಪರ್ಧಿ ಯಾರೂ ಇಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಿದೆ. ಲೋಕಸಭೆ ಚುನಾವಣೆಯಲ್ಲಿ ಭಾರೀ ಬಹುಮತ ಲಭಿಸಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಕೂಗು ಕಡಿಮೆಯಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವರನ್ನು ಒಡೆಯುವ ಹುನ್ನಾರ ಮಾಡಿದರು ಎಂದು ಟಾಂಗ್ ನೀಡಿದರು. ನಾನು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಈ ಕೆಲಸ ಮಾಡಿದರು. ಈಗ ಪರಿಸ್ಥಿತಿ ಬದಲಾಗಿದೆ. ಯಾರೂ ಪ್ರತ್ಯೇಕತೆ ಬಗ್ಗೆ ಮಾತನಾಡುತ್ತಿಲ್ಲ. ನಾವೆಲ್ಲ ಒಗ್ಗಟ್ಟಾಗಿ ಮುಂದೆ ಸಾಗಲು ನಿರ್ಧರಿಸಿದ್ದೇವೆ ಎಂದರು.

Facebook Comments

Sri Raghav

Admin