ಆಪರೇಷನ್ ಕಮಲ ಮಾಡುವ ಅಗತ್ಯ ನಮಗಿಲ್ಲ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa
ಬೆಂಗಳೂರು, ಆ.8- ಆಪರೇಷನ್ ಕಮಲ ಮಾಡುವ ಅಗತ್ಯ ನಮಗಿಲ್ಲ. ಈ ಬಗ್ಗೆ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಮಾಡಿರುವ ಆಪರೇಷನ್ ಕಮಲದ ಕುರಿತ ಆರೋಪಕ್ಕೆ ಇಂದು ತಮ್ಮ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ, ಡಿ.ಕೆ.ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

ತುರ್ತು ಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿಗೆ ಹೋಗಿದ್ದೆ. ಪ್ರಧಾನಿ ಮೋದಿ ಹಾಗೂ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ, ಪ್ರಸಕ್ತ ರಾಜ್ಯ ರಾಜಕಾರಣ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ನಾವು ವಿರೋಧ ಪಕ್ಷದ ಸ್ಥಾನದಲ್ಲಿಯೇ ಕುಳಿತು ಆಡಳಿತ ಪಕ್ಷದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಕೇಂದ್ರ ಸಚಿವರ ಬಳಿ ಮಾತಾಡಿದ್ದೇನೆ. ಮುಂದೆ ಇಡಬೇಕಾದ ಹೆಜ್ಜೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬೀದರ್ ಜಿಲ್ಲೆಯಿಂದ ಪ್ರವಾಸ ಆರಂಭಿಸುತ್ತಿದ್ದೇನೆ. ಅಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಕೆಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ಇದೆ. ಪ್ರವಾಸದ ವೇಳೆ ಇದೆಲ್ಲವನ್ನೂ ಅವಲೋಕಿಸುತ್ತೇವೆ ಎಂದರು. ಹಿರಿಯ ರಾಜಕಾರಣಿ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿಯವರ ನಿಧನ ಮನಸ್ಸಿಗೆ ಅತೀವ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಕರುಣಾನಿಧಿಯವರು ಮುಖ್ಯಮಂತ್ರಿ ಆಗಿದ್ದಾಗ ನನ್ನ ವಿಶೇಷ ಪ್ರಯತ್ನದಿಂದ ತಮಿಳುನಾಡಿನಲ್ಲಿ ಸರ್ವಜ್ಞ ಪ್ರತಿಮೆ ಸ್ಥಾಪನೆ ಆಯಿತು. ಇದಕ್ಕೆ ಅವರು ವಿಶೇಷ ಸಹಕಾರವನ್ನು ಸಹ ನೀಡಿದ್ದರು. ತಿರುವಳ್ಳುವರ್ ಪ್ರತಿಮೆಯನ್ನು ವಿಧಾನಸೌಧಕ್ಕೆ ಕಳುಹಿಸಿಕೊಟ್ಟಿದ್ದರು. ಇಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಮಾಡಲಾಯಿತು. ಕರುಣಾನಿಧಿಯವರು ನನ್ನೊಂದಿಗೆ ಮಾತನಾಡಿದ ರೀತಿ ಯಾವುದನ್ನೂ ಮರೆಯುವಂತಿಲ್ಲ, 5 ಬಾರಿ ಮುಖ್ಯಮಂತ್ರಿ ಆಗಿದ್ದವರು ಕರುಣಾನಿಧಿಯವರು ಈಗ ದೈವಾಧೀನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

Facebook Comments

Sri Raghav

Admin