ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಪ್ರಜ್ವಲ್ ರೇವಣ್ಣಗೆ ಗೌಡರ ಗ್ರೀನ್ ಸಿಗ್ನಲ್

ಈ ಸುದ್ದಿಯನ್ನು ಶೇರ್ ಮಾಡಿ

Devegowda--1

ಹಾಸನ, ಆ.13- ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ನನ್ನ ಮೊಮ್ಮಗ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೇ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಅದರಂತೆ ಈಗ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧಿಗೆ ಇಳಿಯುತ್ತಿದ್ದಾನೆ. ಕಳೆದ ಹಲವು ವರ್ಷಗಳಿಂದ ಜೆಡಿಎಸ್‍ನಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದು , ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿರುವ ಕಾಂಗ್ರೆಸ್ ಜೆಡಿಎಸ್-ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿದ್ದು, ಯಾರಿಂದಲೂ ಕೂಡ ಅದನ್ನು ಅಸ್ತಿರಗೊಳಿಸಲು ಸಾಧ್ಯವಿಲ್ಲ. ಕಾರ್ಯಕರ್ತರ, ಮುಖಂಡರ ಸಲಹೆ ಮೇರೆಗೆ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿದೆ ಎಂದು ಹೇಳಿದರು.

ಇದರಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾನು ಕೂಡ ಇನ್ನು ನಾಲ್ಕೈದು ದಿನಗಳ ಕಾಲ ಇಲ್ಲೇ ಉಳಿದು ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. ಕುಮಾರಸ್ವಾಮಿ ಅವರನ್ನು ಬಿಜೆಪಿಯವರು ಟಾರ್ಗೆಟ್ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆ ಮುನ್ನವೇ ಸರ್ಕಾರವನ್ನು ಉರುಳಿಸಲು ಪ್ರಯತ್ನಗಳು ನಡೆಯುತ್ತಿದೆ. ಆದರೆ ಅದು ವಿಫಲವಾಗಲಿದೆ ಎಂದು ತಿಳಿಸಿದ್ದಾರೆ. ಕುಮಾರಸ್ವಾಮಿಯವರು ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಎಂದು ಹೇಳುವ ಮೂಲಕ ದೇವೇಗೌಡರು ಅಚ್ಚರಿ ಮೂಡಿಸಿದ್ದಾರೆ.

Facebook Comments

Sri Raghav

Admin