ಕೊಡಗಿನ ಪರಿಸ್ಥಿತಿ ಕಣ್ಣಾರೆ ಕಂಡ ನಂತರ ನಿರ್ಮಲಾ ಸೀತಾರಾಮನ್ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Nirmala--02

ಮಡಿಕೇರಿ,ಆ.24- ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಶೀಘ್ರದಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಆಗಮಿಸಿ ಅಧ್ಯಯನ ನಡೆಸಿ ವರದಿ ನೀಡಿದ ಬಳಿಕ ಜಿಲ್ಲೆಗೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ರಕ್ಷಣಾ ಇಲಾಖೆ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡ ಕಳುಹಿಸಿಕೊಡುವಂತೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ಈ ತಂಡವು ವಿವಿಧ ಭಾಗಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಿದ ತಕ್ಷಣವೇ ಪರಿಹಾರ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದರು.
ಇಂದು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಇಲ್ಲಿನ ಜಿಲ್ಲಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ನಿರ್ಮಲ ಸೀತಾರಾಮನ್, ಮಳೆಯಿಂದ ಸಂಕಷ್ಟಕ್ಕೀಡಾಗಿರುವ ಕೊಡಗಿಗೆ ಎಲ್ಲ ರೀತಿಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ. ಯಾರೊಬ್ಬರೂ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.

ಸಂಸದರ ನಿಧಿಯಿಂದ ಒಂದು ಕೋಟಿ ಹಾಗೂ ರಕ್ಷಣಾ ತಂಡಕ್ಕೆ 7 ಕೋಟಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲಾಗುವುದು. ಕೇರಳಕ್ಕೆ ನೀಡಿರುವ ಪರಿಹಾರದ ಭಾಗದಲ್ಲಿ ಒಂದು ಭಾಗವನ್ನು ಮಾತ್ರ ಕರ್ನಾಟಕಕ್ಕೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲಿದ್ದೇವೆ ಎಂದು ಘೋಷಿಸಿದರು.
ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರಾದ ರಾಜನಾಥ್ ಸಿಂಗ್, ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಮತ್ತಿತರರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ನೆರವು ನೀಡಲು ಖುದ್ದು ನಾನೇ ಮನವಿ ಮಾಡಿಕೊಳ್ಳುವೆ. ಜಿಲ್ಲೆಗೆ ಆಗಿರುವ ನಷ್ಟವನ್ನು ಭರಿಸಲು ನಾವು ಸಿದ್ದ ಎಂದು ಹೇಳಿದರು.
ಅನೇಕ ಕಡೆ ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಪರಿಣಾಮ ಜನರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಭೂ ಹೆದ್ದಾರಿ ಸಚಿವರಾದ ಗಡ್ಕರಿ ಅವರನ್ನು ಭೇಟಿ ಮಾಡಿ ರಸ್ತೆಗಳನ್ನು ರಿಪೇರಿ ಮಾಡಲು ಅನುದಾನ ನೀಡುವಂತೆ ಕೋರಲಿದ್ದೇನೆ ಎಂದರು.

ರಾಜ್ಯಕ್ಕೆ ವಿಪತ್ತು ನಿರ್ವಹಣಾ ತಂಡ ಕಳುಹಿಸಿಕೊಡುವಂತೆ ಗೃಹ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಸದ್ಯದಲ್ಲೇ ಭೇಟಿ ಮಾಡುವೆ. ರಾಷ್ಟ್ರೀಯ ವಿಪತ್ತು ನಿರ್ವಹಣದಲ್ಲಿ ಮಡಿಕೇರಿಗೆ ಆರ್ಥಿಕ ನೆರವು ನೀಡಲು ಪ್ರಧಾನಿಗೆ ಮನವಿ ಮಾಡುವೆ ಎಂದು ಹೇಳಿದರು.  ಈಗಾಗಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಸಂಸದರಾದ ಪ್ರತಾಪ್ ಸಿಂಹ, ಸ್ಥಳೀಯ ಶಾಸಕರಾದ ಕೆ.ಜೆ.ಬೋಪಯ್ಯ, ಅಪ್ಪಚ್ಚುರಂಜನ್, ಜಿಲ್ಲಾಧಿಕಾರಿಗಳು, ಎನ್‍ಡಿಆರ್‍ಎಫ್ ತಂಡ, ಪೊಲೀಸರು, ಕಂದಾಯ, ನೀರಾವರಿ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾನಿಯ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ವಾಸ್ತವ ಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಇಂತಹ ಸಂದರ್ಭದಲ್ಲೂ ಕೆಲವರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಜನರನ್ನು ರಕ್ಷಣೆ ಮಾಡಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.  ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.  ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಶಾಸಕರಾದ ಕೆ.ಜೆ.ಬೋಪಯ್ಯ, ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಎನ್‍ಆಡಿಆರ್‍ಎಫ್ ಮುಖ್ಯಸ್ಥರು ಉಪಸ್ಥಿತರಿದ್ದರು.

Facebook Comments

Sri Raghav

Admin