ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaih--01

ಹುಬ್ಬಳ್ಳಿ, ಆ.29- ರಾಜ್ಯದಲ್ಲಿ ಸುಭದ್ರವಾಗಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಅವರ ಈ ಕನಸು ನನಸಾಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ತೆಗೆದುಕೊಳ್ಳುವ ಯಾವುದೇ ನಿರ್ಧಾರ ಎರಡೂ ಪಕ್ಷಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಹೀಗಾಗಿ ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಯಾರೂ ಅಭಿಪ್ರಾಯಪಡಬಾರದು ಎಂದು ಸಿದ್ದು ಕಿವಿಮಾತು ಹೇಳಿದ್ದಾರೆ.

ನಾನು ಮುಂದಿನ ಚುನಾವಣೆಗೆ ನಿಲ್ಲುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಜನ ಆಶೀರ್ವಾದ ಮಾಡಿದರೆ ಮುಂದೆ ಮುಖ್ಯಮಂತ್ರಿಯಾಗುತ್ತೇನೆ ಎಂದಷ್ಟೇ ಹೇಳಿದ್ದೇನೆ. ಈ ಹೇಳಿಕೆಗೆ ಬಣ್ಣ ಕಟ್ಟುವ ಅವಶ್ಯಕತೆ ಇಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಕೆ.ಸಿ.ವೇಣುಗೋಪಾಲ್ ಅವರಿಗೆ ಜೆಡಿಎಸ್ ಮುಖಂಡರು ಯಾವುದೇ ಪತ್ರ ಬರೆದಿಲ್ಲ. ವಿನಾಕಾರಣ ಬಿಜೆಪಿಯವರು ಸುಳ್ಳಿನ ಕಂತೆಗಳನ್ನು ಪೊಣಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ನಾನು ಸಿಎಂ ಆಗಿದ್ದಾಗ ಕೈಗೊಂಡ ಎಲ್ಲ ಯೋಜನೆಗಳಿಗೂ ಸಮ್ಮಿಶ್ರ ಸರ್ಕಾರದಲ್ಲಿ ಹಣ ಬಿಡುಗಡೆಯಾಗುತ್ತದೆ. ಎಲ್ಲ ಯೋಜನೆಗಳೂ ಯಶಸ್ವಿಯಾಗುತ್ತವೆ. ಈ ಕುರಿತಂತೆ ಸಮನ್ವಯ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಸಮನ್ವಯತೆ ಇದ್ದು, ಎಲ್ಲ ಸಚಿವರೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಒಡಕಿಲ್ಲ. ಆದರೆ, ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿ ಸರ್ಕಾರ ಬೀಳಿಸುತ್ತಾರೆ ಎಂಬುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Facebook Comments

Sri Raghav

Admin