ಬೆಂಗಳೂರಲ್ಲಿ ರಹಸ್ಯ ಕಾರ್ಯಾಚರಣೆಗಿಳಿದ ಜಾರಕಿಹೊಳಿ ಬ್ರದರ್ಸ್..!

ಈ ಸುದ್ದಿಯನ್ನು ಶೇರ್ ಮಾಡಿ

Ramesh-Jarakihile-And-Satis
ಬೆಂಗಳೂರು, ಸೆ.10- ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ರಂಗೇರುತ್ತಿದ್ದು, ಜಾರಕಿಹೊಳಿ ಸಹೋದರರು ಬೆಂಗಳೂರಿಗೆ ಬಂದಿದ್ದು ರಹಸ್ಯ ಕಾರ್ಯಾಚರಣೆಗೆ ಇಳಿದಿದ್ದಾರೆ. ಜಾರಕಿಹೊಳಿ ಸಹೋದರರು ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬಾಳ್ಕರ್ ಕೂಡ ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತುಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಜಾರಕಿಹೊಳಿ ಸಹೋದರರು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಉಮಮುಖ್ಯಮಂತ್ರಿ ಪರಮೇಶ್ವರ್ ತಮ್ಮ ವಿದೇಶಿ ಪ್ರವಾಸವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲೇ ತಂಗುತ್ತಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಬೆಳಗ್ಗೆ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿ ಬಿಜೆಪಿ ನಾಯಕರನ್ನು ಭೇಟಿ ಮಾಡಲು ಮುಂದಾಗಿದ್ದರು. ಭೇಟಿಗಾಗಿ ನಿಗದಿಯಾಗಿದ್ದ ಸ್ಥಳದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ದೊರೆತ್ತಿದ್ದರಿಂದ ಸ್ಥಳದ ಬದಲಾವಣೆಯಾಗಿದೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗ್ಗೆ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಹೋಗುವುದಾಗಿ ಹೇಳಿ ತೆರಳಿದವರು ಅಲ್ಲಿಗೆ ಹೋಗುವ ಬದಲು ಅಜ್ಞಾತ ಸ್ಥಳದಲ್ಲಿ ತಂಗಿದ್ದರು.

ಸಚಿವ ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ಸಹ ಬೆಂಗಳೂರಿಗೆ ಆಗಮಿಸುತ್ತಿರುವುದು ಮತ್ತಷ್ಟು ಕುತುಹಲಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಮತ್ತು ಗೋವಾ ಬಿಜೆಪಿ ಮುಖಂಡರ ಮೂಲಕ ಬಿಜೆಪಿಯನ್ನು ಸಂಪರ್ಕಿಸಿರುವ ಜಾರಕಿಹೊಳಿ ಸಹೋದರರು ನಡೆಸುತ್ತಿರುವ ಕಾರ್ಯಾಚರಣೆ ಕಾಂಗ್ರೆಸ್ ವಲಯದಲ್ಲಿ ಅಲ್ಲೋಲ್ಲ ಕಲ್ಲೋಲವನ್ನೇ ಸೃಷ್ಟಿಸಿದೆ.

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ನೋಡಿಕೊಂಡು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜಾರಕಿಹೊಳಿ ಸಹೋದರರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತ್ ಬಂದ್‍ನಲ್ಲಿ ತೊಡಗಿದ್ದ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಂಜೆಯ ನಂತರ ರಾಜ್ಯ ರಾಜಕೀಯ ನಾಯಕರ ಜೊತೆ ಚರ್ಚೆ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಜಾರಕಿಹೊಳಿ ಸಹೋದರರು ತಮ್ಮ ಜೊತೆಯಲ್ಲಿ ಇದ್ದಾರೆ ಎಂದು ಹೇಳಿಕೊಳ್ಳುತ್ತಿರುವ ಶಾಸಕರನ್ನು ಹೈಕಮಾಂಡ್ ನಾಯಕರು ಸಂಪರ್ಕಿಸಿ ಯಾವುದೇ ಕಾರಣಕ್ಕೂ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಬೆಳಗಾವಿ ಜಿಲ್ಲಾ ರಾಜಕೀಯ ಸಂಘರ್ಷ ರಾಜ್ಯ ಸಮ್ಮಿಶ್ರ ಸರ್ಕಾರದ ಬುಡವನ್ನು ಅಲ್ಲಾಡಿಸುವ ಮಟ್ಟಕ್ಕೆ ಬೆಳದಿರುವುದು ಹಲವರ ಹುಬ್ಬೇರಿಸಿದೆ.

Facebook Comments

Sri Raghav

Admin