ಭಾರತ್ ಬಂದ್ : ದೇಶ್ಯಾದ್ಯಂತ ಪ್ರತಿಭಟನೆ, ದೆಹಲಿಯಲ್ಲಿ ರಾಹುಲ್ ರ‍್ಯಾಲಿ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi--01

ನವದೆಹಲಿ, ಸೆ.10-ಇಂಧನ ಬೆಲೆ ಗಗನಕ್ಕೇರುತ್ತಿರುವುದನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಇಂದು ಕರೆ ನೀಡಿರುವ ಭಾರತ್ ಬಂದ್‍ಗೆ ದೇಶದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳನ್ನು ಹೊರತು ಪಡಿಸಿ ರಾಜಧಾನಿ ದೆಹಲಿ ಸೇರಿದಂತೆ ವಿವಿಧೆಡೆ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಭಾರತ್ ಬಂದ್ ಶಾಂತಿಯುತವಾಗಿತ್ತು.  ಗಲಭೆ ಮತ್ತು ಹಿಂಸಾಚಾರ ಸಾಧ್ಯತೆ ತಡೆಯಲು ದೇಶಾದ್ಯಂತ ವ್ಯಾಪಕ ಬಂದೋಬಸ್ತ್ ಮಾಡಲಾಗಿತ್ತು.   ಕೈಲಾಸ ಮಾನಸ ಸರೋವರ ಯಶಸ್ವಿ ಯಾತ್ರೆಯಿಂದ ಹಿಂದಿರುಗಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆಯೇ ಬಂದ್ ನೇತೃತ್ವ ವಹಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೃಹತ್ ಪ್ರತಿಭಟನಾಕಾರರೊಂದಿಗೆ ರಾಹುಲ್ ಮತ್ತು ವಿವಿಧ ವಿರೋಧ ಪಕ್ಷಗಳ ನಾಯಕರು ರಾಜ್‍ಘಾಟ್‍ನಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿ ರಾಮ್‍ಲೀಲಾ ಮೈದಾನಕ್ಕೆ ಕಾಲ್ನಡಿಗೆ ಮೂಲಕ ತೆರಳಿದರು. ಹಿರಿಯ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್, ಅಶೋಕ್ ಗೆಲ್ಹೋಟ್, ಅಂಬಿಕಾ ಸೋನಿ, ಅಹಮದ್ ಪಟೇಲ್, ಲೋಕತಾಂತ್ರಿಕ್ ಜನತಾದಳದ ಮುಖ್ಯಸ್ಥ ಶರದ್ ಯಾದವ್ ಮೊದಲಾದವರು ಪ್ರತಿಭಟನಾ ಪಾದಯಾತ್ರೆಯಲ್ಲಿ ರಾಹುಲ್ ಅವರಿಗೆ ಸಾಥ್ ನೀಡಿದರು.

Band--05

ನಂತರ ಮೈದಾನದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಮ್‍ಲೀಲಾ ಮೈದಾನದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ಯುಪಿಎ ನಾಯಕಿ ಸೋನಿಯಾಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಕಾರ್ಯಕರ್ತರು ಭಾರತ್ ಬಂದ್‍ಗೆ ಬೆಂಬಲ ನೀಡಿ ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸಲ್ ದರ ಏರಿಕೆ ನೀತಿಯನ್ನು ಕಟುವಾಗಿ ಟೀಕಿಸಿದರು.  ದೆಹಲಿಯಲ್ಲಿ ಸರ್ಕಾರಿ ವಾಹನಗಳ ಸಂಚಾರ ವಿರಳವಾಗಿತ್ತು, ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಕೆಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು.  ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ರ್ಯಾಲಿಯಿಂದಾಗಿ ಕೆಲವೆಡೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು.

# ಮಹಾರಾಷ್ಟ್ರ ವರದಿ :

Band-01

ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಬಂದ್ ವೇಳೆ ಕಲ್ಲು ತೂರಾಟ ಮತ್ತು ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಮುಂಬೈನಲ್ಲಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಇಂಧನ ದರ ಏರಿಕೆ ನೀತಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲೂ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಬಿಹಾರದಲ್ಲಿ ಬಂದ್ ಯಶಸ್ವಿ: ಬಂದ್ ಪ್ರಯುಕ್ತ ರಾಜಧಾನಿ ಪಾಟ್ನಾ ಸೇರಿದಂತೆ ವಿವಿಧೆಡೆ ಪ್ರತಿಭಟನಾ ರ್ಯಾಲಿಗಳು ನಡೆದ ಕಾರಣ ಕೆಲವೆಡೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ವ್ಯಾಪಕ ಬಂದೋಬಸ್ತ್ ಮಾಡಲಾಗಿತ್ತು.

Band--0001

# ಪ.ಬಂ.ದಲ್ಲಿ ಉತ್ತಮ ಪ್ರತಿಕ್ರಿಯೆ :
ಪಶ್ಚಿಮ ಬಂಗಾಳದಲ್ಲಿ ಭಾರತ್ ಬಂದ್ ಯಶಸ್ವಿಯಾಗಿದೆ. ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಬಂದ್ ಯಶಸ್ವಿಯಾಗಿದೆ.

# ದಕ್ಷಿಣ ಭಾರತದಲ್ಲಿ ಬಂದ್ ಯಶಸ್ವಿ :
ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲೂ ಭಾರತ್ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಹಾಗೂ ಪಾಂಡಿಚೇರಿ(ಕೇಂದ್ರಾಡಳಿತ ಪ್ರದೇಶ)ಗಳಲ್ಲಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ರ್ಯಾಲಿಗಳನ್ನು ನಡೆಸಿ ಇಂಧನ ಬೆಲೆ ಏರಿಕೆಯನ್ನು ತಕ್ಷಣ ನಿಯಂತ್ರಿಸುವಂತೆ ಆಗ್ರಹಿಸಿದವು.
ಉತ್ತರ ಪ್ರದೇಶ, ರಾಜಸ್ತಾನ, ಮಧ್ಯಪ್ರದೇಶ, ಗೋವಾ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ರಾಜ್ಯಗಳ ಕೆಲವು ಜಿಲ್ಲೆಗಳಲ್ಲಿ ಬಂದ್ ಭಾಗಶ: ಯಶಸ್ವಿಯಾಗಿದೆ.  ಕಾಂಗ್ರೆಸ್ ಆಡಳಿತ ಇರುವ ಪಂಜಾಬ್‍ನಲ್ಲಿ ಬಂದ್ ಸಫಲವಾಗಿದೆ. ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದಂತೆ ಅಲ್ಲಿ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಈಶಾನ್ಯ ರಾಜ್ಯ ಮತ್ತು ಹಿಮಾಚಲ ಪ್ರದೇಶದಲ್ಲಿ ಬಂದ್‍ಗೆ ಸಾಧಾರಣ ಪ್ರತಿಕ್ರಿಯೆ ಕಂಡುಬಂದಿದೆ. ಈ ರಾಜ್ಯಗಳ ವಿವಿಧೆಡೆ ಪ್ರತಿಭಟನಾಕಾರರು ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Facebook Comments

Sri Raghav

Admin