ಬಿಜೆಪಿ ನೈತಿಕವಾಗಿ ದಿವಾಳಿಯಾಗಿದ್ದು, ಅಧಿಕಾರಕ್ಕಾಗಿ ಹಪಹಪಿಸುತ್ತಿದೆ : ವೇಣುಗೋಪಾಲ್

ಈ ಸುದ್ದಿಯನ್ನು ಶೇರ್ ಮಾಡಿ

Venugopal--01
ಬೆಂಗಳೂರು, ಸೆ.16- ಬಿಜೆಪಿ ನೈತಿಕವಾಗಿ ದಿವಾಳಿಯಾಗಿದ್ದು, ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎಲ್ಲ ಗೊಂದಲಗಳನ್ನೂ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಮ್ಮ ಶಾಸಕರಿಗೂ ಕರೆ ಮಾಡಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ನಾಯಕರ ಷಡ್ಯಂತ್ರದಿಂದ ಇಂತಹ ಸನ್ನಿವೇಶ ನಿರ್ಮಾಣವಾಗಿದೆ. ಬಿಜೆಪಿ ಅನಧಿಕೃತ ರಾಜಕಾರಣಕ್ಕೆ ಕೈ ಹಾಕಿದ್ದು, ನಮ್ಮ ಶಾಸಕರು ಯಾರೂ ಕೂಡ ಬಿಜೆಪಿಗೆ ಹೋಗುವುದಿಲ್ಲ. ನಮಗೆ ನಮ್ಮ ಶಾಸಕರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ನೂರು ದಿನಗಳನ್ನು ಯಶಸ್ವಿಯಾಗಿ ಪೂರೈಸಿ ಮುನ್ನಡೆಯುತ್ತಿದೆ. ಐದು ವರ್ಷವನ್ನು ಈ ಸರ್ಕಾರ ಪೂರ್ಣಗೊಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಮುಂದಿನ ಲೋಕಸಭಾ ಚುನಾವಣೆಗೆ ಸಿದ್ಧತೆ, ಕಾಂಗ್ರೆಸ್‍ನಲ್ಲಿನ ಪದಾಧಿಕಾರಿಗಳ ಬದಲಾವಣೆ ಕುರಿತಂತೆ ಎಲ್ಲ ವಿಚಾರಗಳನ್ನು ಕೂಡ ಚರ್ಚೆ ಮಾಡಲಾಗುವುದು ಎಂದರು.

ಸಂಪುಟ ವಿಸ್ತರಣೆ ಮುಂದೂಡಿಕೆ ಇಲ್ಲ: ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವುದು ಖಚಿತ. ಸಂಪುಟ ವಿಸ್ತರಣೆ ಮುಂದೂಡಲಾಗುತ್ತದೆ ಎಂಬುದರಲ್ಲಿ ಹುರುಳಿಲ್ಲ. ಈಗಾಗಲೇ ಪ್ರಕಟಿಸಿದಂತೆ ಈ ಮಾಸಾಂತ್ಯದೊಳಗೆ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

Facebook Comments

Sri Raghav

Admin