‘ಬಿಜೆಪಿಯವರು ನಿರಂತರವಾಗಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ’

ಈ ಸುದ್ದಿಯನ್ನು ಶೇರ್ ಮಾಡಿ

Parameshwar---01
ತುಮಕೂರು, ಸೆ.20- ಕಳೆದ ಒಂದು ತಿಂಗಳಿನಿಂದ ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸುತ್ತಿರುವ ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು.

ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಅತಂತ್ರಗೊಳಿಸುವ ಪ್ರಯತ್ನ ನಿರಂತರವಾಗಿ ಮಾಡಲಾಗುತ್ತಿದೆ. ರೆಸಾರ್ಟ್ ಯಾತ್ರೆ ರಾಜಕಾರಣದ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ. ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ಅದಕ್ಕೂ ಅಡ್ಡಿಪಡಿಸುತ್ತಿದ್ದಾರೆ ಎಂದರು.

ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗುವ ಯೋಗವಿಲ್ಲ. ಆದರೆ, ಬಲವಂತದಿಂದ ಶಾಸಕರನ್ನು ಹಿಡಿದಿಟ್ಟಿಕೊಂಡು ರೆಸಾರ್ಟ್ ರಾಜಕಾರಣ ಮಾಡಲು ಮುಂದಾಗಿದ್ದಾರೆ. ಈ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದರು. ನಿನ್ನೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದೇವೆ.

ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಹಲವು ಸಂದೇಶಗಳನ್ನು ನೀಡಿದ್ದಾರೆ. ಅವುಗಳೆಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಮತ್ತೊಂದು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗುತ್ತಿದೆಯೇ ಎಂಬ ಮಾತನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಪರಮೇಶ್ವರ್, ಈ ಬಗ್ಗೆ ಹೈಕಮಾಂಡ್‍ನೊಂದಿಗೆ ಯಾವುದೇ ರೀತಿ ಮಾತುಕತೆ ನಡೆದಿಲ್ಲ ಎಂದರು.

Facebook Comments

Sri Raghav

Admin