ರಾಯ್‍ಬರೇಲಿಯಲ್ಲಿ ರೈಲು ಹಳಿ ತಪ್ಪಿ 7 ಮಂದಿ ಪ್ರಯಾಣಿಕರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Train--01

ನವದೆಹಲಿ/ಲಕ್ನೋ, ಅ.10- ಉತ್ತರ ಪ್ರದೇಶದ ರಾಯ್‍ಬರೇಲಿಯಲ್ಲಿ ಇಂದು ಮುಂಜಾನೆ ನ್ಯೂ ಫರಕ್ಕ ಎಕ್ಸ್‍ಪ್ರೆಸ್ ರೈಲಿನ ನಾಲ್ಕು ಬೋಗಿಗಳು ಮತ್ತು ಎಂಜಿನ್ ಹಳಿ ತಪ್ಪಿ ಏಳು ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ರಾಯ್ ಬರೇಲಿ ಜಿಲ್ಲೆಯ ಹರ್‍ಚಂದ್‍ಪುರ್ ಬಳಿ ಇಂದು ಮುಂಜಾನೆ 6.05ರಲ್ಲಿ ಈ ಘಟನೆ ಸಂಭವಿಸಿದೆ ಎಂದು ಉತ್ತರ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಸತೀಶ್ ಕುಮಾರ್ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಅವಘಡ ನಡೆದ ಸ್ಥಳಕ್ಕೆ ಲಕ್ನೋದಿಂದ ಅಪಘಾತ ಪರಿಹಾರ ವೈದ್ಯಕೀಯ ವಾಹನದಲ್ಲಿ ವೈದ್ಯರ ತಂಡವೊಂದನ್ನು ಕಳುಹಿಸಲಾಗಿದೆ. ಮುಗಲ್‍ಸರೈನ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್‍ನಲ್ಲಿ ತುರ್ತು ಸಹಾಯವಾಣಿ ಸಂಖ್ಯೆಗಳ ವ್ಯವಸ್ಥೆ ಮಾಡಲಾಗಿದೆ.

ಈ ಮಾರ್ಗದಲ್ಲಿ ಇತರ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ರೈಲ್ವೆ ಮಂಡಳಿ ಅಧ್ಯಕ್ಷ ಅಶ್ವನಿ ಲೋಹನಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತುರ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ವರಿಷ್ಠಾಧಿಕಾರಿ, ಆರೋಗ್ಯ ಅಧಿಕಾರಿಗಳು ಮತ್ತು ಎನ್‍ಡಿಆರ್‍ಎಫ್‍ಗೆ ಸೂಚನೆ ನೀಡಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದು, ಕುಟುಂಬ ವರ್ಗದವರಿಗೆ ಅಗತ್ಯವಾದ ಎಲ್ಲ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಉನ್ನತಾಧಿಕಾರಿಗಳಿಗೆ ಆದೇಶಿಸಿದ್ದಾರೆ.

Facebook Comments