ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು ..?

ಈ ಸುದ್ದಿಯನ್ನು ಶೇರ್ ಮಾಡಿ

JDS--01

ಬೆಂಗಳೂರು, ಅ.11-ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಇಂದು ಸಂಜೆ ಮಹತ್ವದ ಸಭೆ ನಡೆಯಲಿದೆ. ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಸೇರಿದಂತೆ ಮಂಡ್ಯ ಜಿಲ್ಲೆಯ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಉಪ ಚುನಾವಣೆಗೆ ಪಕ್ಷದಿಂದ ಅಧಿಕೃತವಾಗಿ ಯಾರನ್ನು ಕಣಕ್ಕಿಳಿಸಬೇಕೆಂಬ ಬಗ್ಗೆ ಮುಖಂಡರು ಸಮಾಲೋಚನೆ ಮಾಡಿ ನಿರ್ಧಾರ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಂಡ್ಯ ಲೋಕಸಭೆ ಉಪ ಚುನಾವಣೆಯ ಟಿಕೆಟ್ ಆಕಾಂಕ್ಷಿ , ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ, ನಿವೃತ್ತ ಅಧಿಕಾರಿ ಲಕ್ಷ್ಮಿ ಅಶ್ವಿನ್‍ಗೌಡ, ಡಿ.ಸಿ.ತಮ್ಮಣ್ಣ ಅವರ ಪುತ್ರ ಸಂತೋಷ್ ತಮ್ಮಣ್ಣ ಅವರೂ ಸೇರಿದಂತೆ ಹಲವರ ಹೆಸರು ಕೇಳಿಬರುತ್ತಿವೆ. ತಾವು ಕೂಡಾ ಸ್ಪರ್ಧಾಕಾಂಕ್ಷಿಯಾಗಿದ್ದು, ವರಿಷ್ಠರು ಅವಕಾಶ ಮಾಡಿಕೊಟ್ಟರೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಶಿವರಾಮೇಗೌಡರು ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುಂದುವರೆಯಲಿದ್ದು, ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗಿದೆ.

# ಹೆಚ್ಚಿನ ಬಹುಮತದಿಂದ ಗೆಲ್ಲಿಸಿ:
ರಾಮನಗರ ವಿಧಾನಸಭೆ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದ್ದು, ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ಸ್ಥಳೀಯ ಮುಖಂಡರಿಗೆ ದೇವೇಗೌಡರು ಸೂಚಿಸಿದ್ದಾರೆ. ನಿನ್ನೆ ರಾತ್ರಿ ರಾಮನಗರದ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಗೌಡರು, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಉಪ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅನಿತಾಕುಮಾರಸ್ವಾಮಿ ಅವರನ್ನು ಗೆಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ. ದೇವೇಗೌಡರು ನೀಡಿದ ಸಲಹೆಗೆ ಜೆಡಿಎಸ್‍ನ ಸ್ಥಳೀಯ ಮುಖಂಡರು ಒಪ್ಪಿಗೆ ಸೂಚಿಸಿದ್ದು, ಹೆಚ್ಚಿನ ಬಹುಮತದ ಅಂತರದಿಂದ ಗೆಲ್ಲಿಸಿಕೊಡುವುದಾಗಿ ಮುಖಂಡರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Facebook Comments