ಪ್ರತಿ ವರ್ಷದಂತೆ ಈ ವರ್ಷವೂ ಟಿಪ್ಪು ಜಯಂತಿ ಆಚರಣೆ : ಡಿಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Parameshwar---01

ಜಮಖಂಡಿ, ಆ.16- ರಾಜ್ಯ ಸರ್ಕಾರ ಈ ವರ್ಷವೂ ಟಿಪ್ಪು ಜಯಂತಿಯನ್ನು ಆಚರಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಜಮಖಂಡಿ ನಗರದಲ್ಲಿಂದು ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಜಯಂತಿಯನ್ನು ಬಿಜೆಪಿ ಯವರು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದಾರೆ. ಆದರೆ ರಾಜ್ಯ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಜಯಂತಿ ಆಚರಿಸಲಿದೆ ಎಂದು ತಿಳಿಸಿದರು.

ಕಾಂಗ್ರೆಸ್‍ನಲ್ಲಿಂದು ಭರ್ಜರಿ ಭಿನ್ನಮತ ಸ್ಫೋಟ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪನವರಿಗೆ ಹೇಗಾದರೂ ಮಾಡಿ ಮುಖ್ಯಮಂತ್ರಿ ಆಗಬೇಕೆಂಬ ಕನಸಿದೆ. ಮೇಲಿಂದ ಮೇಲೆ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ಪ್ರತಿಬಾರಿಯೂ ವಿಫಲರಾಗುತ್ತಿದ್ದಾರೆ. ಆದ್ದರಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರ್ಕಾರ ಐದು ವರ್ಷ ಸುಭದ್ರ ಆಡಳಿತ ನೀಡಲಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ವಿ.ಎಸ್. ಉಗ್ರಪ್ಪ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಸ್ಥಳೀಯರು, ಕಾರ್ಯಕರ್ತರು, ಬಳ್ಳಾರಿ ಮುಖಂಡರೊಂದಿಗೆ ಚರ್ಚೆ ನಡೆಸಿ ಈ ಆಯ್ಕೆ ನಡೆದಿದೆ. ಈ ಬಗ್ಗೆ ಯಾರಲ್ಲೂ ಅಸಮಾಧಾನವಿಲ್ಲ. ಉಗ್ರಪ್ಪ ಅವರು ಗೆಲ್ಲುವ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು.

# ಹುಬ್ಬಳ್ಳಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ
ಕಳೆದ ರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದ ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ , ಹಳೇಹುಬ್ಬಳ್ಳಿ ಪೊಲೀಸ್ ಠಾಣೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ದೈನಂದಿತನ ಹಾಜರಾತಿ, ರೌಡಿ ಶೀಟರ್‍ಗಳ ಬಗ್ಗೆ ಮಾಹಿತಿ, ದಿನಚರಿ ಪುಸ್ತಕಗಳನ್ನು ಪರಿಶೀಲಿಸಿದ ಅವರು, ಅಪರಾಧ ಚಟುವಟಿಕೆಗಳನ್ನು ಮಟ್ಟಹಾಕಲು ಸೂಚಿಸಿದ್ದರು. ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್, ಎಸಿಪಿ ಪಠಾಣ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments