ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತೆ ಮುಂದೂಡಿಕೆ..?

ಈ ಸುದ್ದಿಯನ್ನು ಶೇರ್ ಮಾಡಿ

Rajyotsava-Award-01

ಬೆಂಗಳೂರು, ನ.13-ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನ.1ರಂದು ನಡೆಯಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿತ್ತು. ಈ ಬಾರಿ ವಿವಿಧ ಕ್ಷೇತ್ರಗಳ 63 ಗಣ್ಯರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದೆ.

ರಾಜ್ಯೋತ್ಸವಕ್ಕೂ ಮುನ್ನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕøತರನ್ನು ಆಯ್ಕೆ ಮಾಡಿದ್ದರೂ ಅಧಿಕೃತವಾಗಿ ಪ್ರಕಟಿಸಿಲ್ಲ.ನ.15ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಸ್ತಾಪವಾಗಿತ್ತಾದರೂ ಅಧಿಕೃತವಾಗಿ ಕಾರ್ಯಕ್ರಮ ನಿರ್ಧಾರವಾಗಿರಲಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಅನಂತ್‍ಕುಮಾರ್ ಅವರು ನಿನ್ನೆ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆಯವರೆಗೂ ಶೋಕಾಚರಣೆ ಘೋಷಣೆ ಮಾಡಿದೆ. ಬೀದರ್‍ನಲ್ಲಿ ನಾಳೆ ನಡೆಯಬೇಕಿದ್ದ ಸಹಕಾರ ಸಪ್ತಾಹ ಹಾಗೂ ರೈತ ಸ್ಪಂದನಾ ಕಾರ್ಯಕ್ರಮ ನ.15ಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ.15 ರಂದು ಬೀದರ್ ಪ್ರವಾಸ ಕೈಗೊಳ್ಳಲಿದ್ದಾರೆ. ಹೀಗಾಗಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ.

Facebook Comments