ನೂತನ ಶಾಸಕರಾಗಿ ಅನಿತಾ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

Anita-Kumaraswamy--01

ಬೆಂಗಳೂರು, ನ.15-ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದ ಅನಿತಾ ಕುಮಾರಸ್ವಾಮಿ ಇಂದು ವಿಧಾನಸಭೆಯ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.  ವಿಧಾನಸಭೆ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಅನಿತಾಕುಮಾರಸ್ವಾಮಿ ಅವರಿಗೆ ಬೋಧಿಸಿದರು.

ವಿಧಾನಸೌಧದ ಸಭಾಧ್ಯಕ್ಷರ ಕೊಠಡಿಯಲ್ಲಿ ಅನಿತಾಕುಮಾರಸ್ವಾಮಿ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾ ಕಾರ್ಯದರ್ಶಿ ಮೂರ್ತಿ ಸೇರಿದಂತೆ ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ಹಾಗೂ ರಾಮನಗರ ಕ್ಷೇತ್ರದ ಜೆಡಿಎಸ್ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾಕುಮಾರಸ್ವಾಮಿ, ತಮ್ಮನ್ನು ಆಯ್ಕೆ ಮಾಡಿದ ರಾಮನಗರ ಕ್ಷೇತ್ರದ ಜನರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ಎರಡನೇ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ರಾಮನಗರ ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಭರವಸೆ ನೀಡಿದರು. ತಮಗೆ ಸಚಿವ ಸ್ಥಾನ ಸಿಗುವುದರ ಬಗ್ಗೆ ಇದುವರೆಗೂ ಮಾಹಿತಿ ಇಲ್ಲ. ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೀದರ್ ಪ್ರವಾಸ ತೆರಳಿರುವ ಹಿನ್ನೆಲೆಯಲ್ಲಿ ಪತ್ನಿಯ ಪ್ರಮಾಣವಚನ ಕಾರ್ಯಕ್ರಮದಲ್ಲಿ ಹಾಜರಾಗಲು ಸಾಧ್ಯವಾಗುತ್ತಿಲ್ಲವೆನ್ನಲಾಗಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿರಲಿದ್ದಾರೆ.  ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಿಂದ ಕುಮಾರಸ್ವಾಮಿಯವರು ಆಯ್ಕೆಯಾಗಿದ್ದ ಹಿನ್ನೆಲೆಯಲ್ಲಿ, ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿಯನ್ನಾಗಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನೇ ಕಣಕ್ಕಿಳಿಸಿದ್ದರು.

Facebook Comments

Sri Raghav

Admin