ರಾಜ್ಯದ ಮೇಲೆ ‘ಗಜ’ದಾಳಿ ಇಲ್ಲ, ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Gaja--01

ಬೆಂಗಳೂರು, ನ.15- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಗಜ ಚಂಡಮಾರುತದಿಂದ ರಾಜ್ಯದಲ್ಲಿ ಯಾವುದೇ ಪ್ರತಿಕೂಲ ಪರಿಣಾಮ ಉಂಟಾಗುವುದಿಲ್ಲ. ಭಾರೀ ಮಳೆಯಾಗುವ ಸಾಧ್ಯತೆಗಳು ಇಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸ ರೆಡ್ಡಿ ತಿಳಿಸಿದರು.

ಗಜ ಚಂಡಮಾರುತದ ರಾಜ್ಯದ ಜನರು ಆತಂಕಪಡುವ ಅಗತ್ಯವಿಲ್ಲ. ಅದು ಅರಬ್ಬಿ ಸಮುದ್ರದ ಕಡೆಗೆ ಚಲಿಸುತ್ತಿದ್ದು, ಕರ್ನಾಟಕದ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ. ಆದರೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗದ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬರಲಿದೆ ಎಂದು ತಿಳಿಸಿದರು.

ಚಂಡಮಾರುತದ ಪ್ರಭಾವದಿಂದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ನಾಳೆಯವರೆಗೂ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಅವರು ಈ ಸಂಜೆಗೆ ತಿಳಿಸಿದರು. ನವೆಂಬರ್ 17ರಿಂದ ಒಂದೆರಡು ದಿನ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಅರಬ್ಬಿ ಸಮುದ್ರವನ್ನು ಚಂಡಮಾರುತ ಪ್ರವೇಶಿಸುವುದರಿಂದ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ. ಈಗಾಗಲೇ ತಮಿಳುನಾಡು, ಕೇರಳ ಹಾಗೂ ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಭಾಗದಲ್ಲಿ ಮಳೆಯಾಗುತ್ತಿದೆ ಎಂದರು.

ಗಜ ಚಂಡಮಾರುತದ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರ ತೀರ ಪ್ರದೇಶದ ಕಡೆಗೆ ಚಲಿಸುವ ಸಾಧ್ಯತೆಗಳಿದ್ದು, ಆ ಸಂದರ್ಭದಲ್ಲಿ ರಾಜ್ಯದ ಮಳೆಯಾಗುವ ಮುನ್ಸೂಚನೆಗಳು ದೊರೆತಿವೆ. ನವೆಂಬರ್ 19ರಿಂದ 2-3 ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಲಿದೆಯೇ ಎಂಬುದನ್ನು ಕಾದುನೋಡಬೇಕಾಗಿದೆ. ಇನ್ನೆರಡು ದಿನ ಕಳೆದ ನಂತರ ವಾತಾವರಣದಲ್ಲಾಗುವ ಬದಲಾವಣೆ ಆಧರಿಸಿ ಹವಾಮಾನ ಮುನ್ಸೂಚನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin