ರೈತರನ್ನು ಸರ್ಕಾರದ ವಿರುದ್ಧ ಬಿಜೆಪಿಯವರು ಎತ್ತಿಕಟ್ಟಿದ್ದಾರೆ : ಡಿಸಿಎಂ ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

Parameshwar--01
ಬೆಂಗಳೂರು, ನ.19-ಕೇಂದ್ರ ಬಿಜೆಪಿ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ರೈತರ ಪರವಾಗಿ ಏನೂ ಮಾಡಿಲ್ಲ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯದ ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಭಾವನಾತ್ಮಕವಾಗಿ ರೈತರನ್ನು ಎತ್ತಿ ಕಟ್ಟುವ ಕೆಲಸವನ್ನು ರಾಜ್ಯದ ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ ಎಂದು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿಯವರ 101ನೇ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಅದರ ಬಗ್ಗೆ ಚಕಾರವೆತ್ತದ ರಾಜ್ಯದ ಬಿಜೆಪಿ ನಾಯಕರು, ರೈತರನ್ನು ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ನಮ್ಮ ಸರ್ಕಾರ ರೈತರ ಹಿತರಕ್ಷಣೆ ಮಾಡಲು ಬದ್ಧವಾಗಿದೆ. 49 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದೇವೆ. ಸೈದ್ಧಾಂತಿಕವಾಗಿ ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ. ಅನ್ನ ಕೊಡುವ ರೈತರ ಹಿತ ಕಾಪಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಕೇಂದ್ರ ಸರ್ಕಾರ ಏನು ಮಾಡಿದೆ? ಕೇವಲ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚೆಗೆ ನಡೆದ ಮೂರು ಲೋಕಸಭೆ, ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ದೇಶಕ್ಕೆ ಒಂದು ಸಂದೇಶ ನೀಡಿದೆ. 2019ಕ್ಕೆ ರಾಷ್ಟ್ರದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು. ಭಾರತೀಯರು ಸಾಕಷ್ಟು ಜನ ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ. ಆದರೆ 15 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಧೀಮಂತ ನಾಯಕಿ ಇಂದಿರಾಗಾಂಧಿಯವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಹಸಿರುಕ್ರಾಂತಿ ಮಾಡಿ, ರೈತರ ಬದುಕನ್ನು ಹಸನಾಗಿಸಿದರು. ಬ್ಯಾಂಕ್‍ಗಳನ್ನು ರಾಷ್ಟ್ರೀಕೃತಗೊಳಿಸಿ ಬಡವರ ಬಳಿ ಕೊಂಡೊಯ್ದರು. ಬಿಜೆಪಿಯವರು ಯಾವ ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶ್ನಿಸಿದರಲ್ಲದೆ, ಜನರ ಮನಸ್ಸಿನಿಂದ ಕಾಂಗ್ರೆಸ್ ಪಕ್ಷವನ್ನು ದೂರ ಮಾಡುವ ಕೆಲಸ ಮಾಡುತ್ತಿದ್ದಾರೆ. ದೇಶಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯನ್ನು ಮರೆ ಮಾಚುವ ಕಾರ್ಯ ಮಾಡುತ್ತಿದ್ದಾರೆ. ಅಪಪ್ರಚಾರ ಮಾಡುವ ಉದ್ದೇಶ ಅವರದ್ದಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನವರ ಆಡಳಿತದಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅವುಗಳನ್ನು ಸಮ್ಮಿಶ್ರ ಸರ್ಕಾರದಲ್ಲಿ ಮುಂದುವರೆಸಲಾಗಿದೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ 2019ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದೇಶಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯನ್ನು ಅಳಿಸಿ ಹಾಕಲು ಸಾಧ್ಯವಿಲ್ಲ. ಇಂದಿರಾಗಾಂಧಿಯವರು ಕೈಗೊಂಡ ಬ್ಯಾಂಕ್‍ಗಳ ರಾಷ್ಟ್ರೀಕರಣ, ಭೂಸುಧಾರಣೆಯಂತಹ ಮಹತ್ವದ ಕಾರ್ಯಗಳಿಗೆ ಕಾಂಗ್ರೆಸ್‍ನಲ್ಲೇ ವಿರೋಧ ಉಂಟಾಗಿ ಕಾಂಗ್ರೆಸ್ ಇಬ್ಭಾಗವಾಯಿತು. ಆದರೆ ಜನರು ಇಂದಿರಾ ಅವರ ಪರವಾಗಿ ನಿಂತರು.

ಅಮೆರಿಕದ ಅಧ್ಯಕ್ಷರಾಗಿದ್ದ ನಿಕ್ಸನ್ ಅವರು ಇಂದಿರಾಗಾಂಧಿಯವರನ್ನು ದ್ವೇಷಿಸುತ್ತಿದ್ದರು. ಆದರೂ ಎದೆಗುಂದದೆ ಭಾರತ-ಪಾಕ್ ಯುದ್ಧದಲ್ಲಿ ಗೆಲುವು ಸಾಧಿಸಿದ್ದರು. ಇಂದಿರಾಗಾಂಧಿಯವರ ಕೊಡುಗೆಗಳು ಕಾಂಗ್ರೆಸ್ ಪಕ್ಷಕ್ಕೆ ಭದ್ರಬುನಾದಿ ಎಂದು ದಿನೇಶ್‍ಹೇಳಿದರು. ಉಪಚುನಾವಣೆಗಳ ಗೆಲುವು ಕಾಂಗ್ರೆಸ್ ಪಕ್ಷಕ್ಕೆ ಪ್ರೇರಣೆಯಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಗೆಲುವಿಗೆ ದಿಕ್ಸೂಚಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಮೈಮರೆಯದೆ ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ ನ್ಯಾಯ ಒದಗಿಸಿರು ವುದೇ ಕಾಂಗ್ರೆಸ್ ಪಕ್ಷದ 70 ವರ್ಷ ಗಳ ಸಾಧನೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿ ಕಾರ್ಜುನ ಖರ್ಗೆ, ಸುಧಾಕರ, ಯು.ಬಿ. ವೆಂಕಟೇಶ್, ಮೋಟಮ್ಮ ಮತ್ತಿತರರು ಉಪಸ್ಥಿತರಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin