BREAKING : ಪ್ರತಿಭಟನೆ ವಾಪಸ್ ಪಡೆದ ರೈತರು, ಸಿಎಂಗೆ 15 ದಿನ ಡೆಡ್‌ಲೈನ್‌

ಈ ಸುದ್ದಿಯನ್ನು ಶೇರ್ ಮಾಡಿ

Former--01

ಬೆಂಗಳೂರು, ನ.19- ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ, ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ನಡೆದ ವಿಧಾನಸೌಧ ಚಲೋ ಹಾಗೂ ಅನಿರ್ದಿಷ್ಟಾವಧಿ ಮುಷ್ಕರವನ್ನು ರೈತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಭರವಸೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ರೈತರು ರೈಲ್ವೆ ನಿಲ್ದಾಣದಿಂದ ವಿಧಾನಸೌಧ ಮುತ್ತಿಗೆ ಹಾಕಲು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ಫ್ರೀಡಂಪಾರ್ಕ್ ಬಳಿ ತಡೆದು ನಿಲ್ಲಿಸಿದ್ದರು.

ಸಚಿವ ಬಂಡೆಪ್ಪ ಕಾಶಂಪುರ್ ಪ್ರತಿಭಟನಾ ನಿರತ ಸ್ಥಳಕ್ಕೆ ಆಗಮಿಸಿ ರೈತರ ಮನವೊಲಿಸುವ ಪ್ರಯತ್ನ ನಡೆಸಿದರಾದರೂ ಫಲನೀಡಲಿಲ್ಲ. ಸಿಟ್ಟಾಗಿದ್ದ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡು ವಾಪಸ್ ಕಳುಹಿಸಿದ್ದಲ್ಲದೆ, ಮುಖ್ಯಮಂತ್ರಿಗಳೇ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದರು. ಕೊನೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನಿಯೋಗವನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಅವರು ಸುದೀರ್ಘ ಚರ್ಚೆ ನಡೆಸಿದರು.

ರೈತರ ಸಂಪೂರ್ಣ ಸಾಲ ಮನ್ನಾ, ಕಬ್ಬು ಬೆಳೆಗಾರರ ಬಾಕಿ ಪಾವತಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ನಿಯೋಗ ಮುಖ್ಯಮಂತ್ರಿ ಅವರ ಮುಂದಿಟ್ಟಿತ್ತು. ಸಾಧುವಾದ ಬೇಡಿಕೆಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದರು. ನಿನ್ನೆ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರ ಕುರಿತು ಕುಮಾರಸ್ವಾಮಿ ಆಡಿರುವ ಮಾತುಗಳಿಗೆ ಕ್ಷಮೆ ಕೇಳಬೇಕೆಂದು ನಿಯೋಗ ಒತ್ತಾಯಿಸಿತ್ತು.

ಇದಕ್ಕೂ ಸಕಾರಾತ್ಮಕವಾಗಿ ಸ್ಪಂದಿಸಿದ ಕುಮಾರಸ್ವಾಮಿ, ರೈತರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನಾನು ಯಾರನ್ನೂ ಅವಹೇಳನ ಮಾಡಿಲ್ಲ. ಅಪಾರ್ಥಕ್ಕೆ ಅವಕಾಶ ಬೇಡ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸಮಾಧಾನಗೊಂಡ ರೈತರು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಪ್ರಕಟಿಸಿದ್ದು, 15ದಿನಗಳೊಳಗಾಗಿ ಪ್ರಮುಖ ಬೇಡಿಕೆಗಳು ಈಡೇರದೇ ಇದ್ದರೆ ಉಗ್ರ ಸ್ವರೂಪದ ಪ್ರತಿಭಟನೆ ನಡೆಸಬೇಕಾದೀತು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

Kodihalli-Chdrashekhae

 

Facebook Comments

Sri Raghav

Admin