‘4 ವರ್ಷ ಎಲ್ಲಿ ಮಲಗಿದ್ದೆ’ ಎಂಬ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Parameshwar--Kumaraswamny

ತುಮಕೂರು,ನ.21-ಸಂಕಷ್ಟದಲ್ಲಿರುವ ರಾಜ್ಯದ ರೈತರು ಮತ್ತು ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ನಡೆಸಿದ್ದಾರೆ. ನಾಳೆ ಮತ್ತೊಂದು ಸುತ್ತಿನ ಮಾತುಕತೆಯನ್ನು ಮುಖ್ಯಮಂತ್ರಿಯವರು ನಡೆಸಲಿದ್ದು, ಯಾವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಎಫ್‍ಆರ್‍ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಕೂಡಲೇ ಕೇಂದ್ರ ಸರ್ಕಾರ ದರ ನಿಗದಿ ಮಾಡಿ ರೈತರು ಮತ್ತು ಕಾರ್ಖಾನೆಗಳ ಮಾಲೀಕರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

# ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಸಮರ್ಥನೆ:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಹಳ್ಳಿ ಭಾಷೆಯಲ್ಲಿ ಹೇಳಿಕೆ ನೀಡಿದ್ದಾರೆ. ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಿಎಂ ಹೇಳಿಕೆಯನ್ನು ಪರಮೇಶ್ವರ್ ಸಮರ್ಥಿಸಿಕೊಂಡರು. ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆ ಸೇರಿದಂತೆ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ವಿರೋಧ ಪಕ್ಷ ಬಿಜೆಪಿ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡು ಸಲಹೆಸೂಚನೆಗಳನ್ನು ನೀಡಬೇಕು. ರೈತರನ್ನು ಎತ್ತಿಕಟ್ಟುವ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದರು. ಇದೇ ವೇಳೆ ನಾಡಿನ ಜನತೆಗೆ ಈದ್ ಮಿಲಾದ್ ಪರಮೇಶ್ವರ್ ಶುಭ ಕೋರಿದರು. ಸಂಸದ ಮುದ್ದಹನುಮೇಗೌಡ ಮತ್ತಿತರರು ಉಪಸ್ಥಿತರಿದ್ದರು.

# ಬಿಜೆಪಿ ವಿರುದ್ಧ ವಾಗ್ದಾಳಿ:
ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ್ ರೈತರ ಮೇಲೆ ಗೋಲಿಬಾರ್ ಮಾಡಿದವರಿಂದ ನಾವು ಪಾಠ ಕಲಿಯಬೇಕಾದ ಅಗತ್ಯವಿಲ್ಲ. ಬಿಜೆಪಿಯವರಿಗೆ ಪ್ರತಿಭಟನೆ ನಡೆಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಓಡಿಸದೆ ಬೇರೆಯವರ ತಟ್ಟೆಯಲ್ಲಿ ಏನಿದೆ ಎಂಬುದನ್ನು ಹುಡುಕುತ್ತಿದ್ದಾರೆ. ರೈತರ ಪ್ರತಿಭಟನೆಯ ಲಾಭ ಪಡೆಯಲು ಅವರು ಯತ್ನಿಸುತ್ತಿದ್ದು, ಇದರಲ್ಲಿ ಅವರು ಯಶಸ್ವಿಯಾಗಲಾರರು ಎಂದರು.

Facebook Comments

Sri Raghav

Admin