ಕಬ್ಬು ಬೆಳೆಗಾರರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಸಿಎಂಗೆ ಗೌಡರ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-And-JDS-Devegow
ಬೆಂಗಳೂರು, ನ.21-ಕಬ್ಬು ಬೆಳೆಗಾರರ ಸಮಸ್ಯೆಯನ್ನು ಸರ್ಕಾರ ಶೀಘ್ರವಾಗಿ ಬಗೆಹರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಲಹೆ ಮಾಡಿದ್ದಾರೆ. ಧಾನಸೌಧದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮುಖ್ಯಮಂತ್ರಿಯವರು ದೇವೇಗೌಡರನ್ನು ಭೇಟಿ ಮಾಡಿ ಸುದೀರ್ಘ ಸಮಾಲೋಚನೆ ನಡೆಸಿದರು.

ಸಮಾಲೋಚನೆ ಸಂದರ್ಭದಲ್ಲಿ ಗೌಡರು ಮುಖ್ಯಮಂತ್ರಿಗೆ ಈ ರೀತಿಯ ಸಲಹೆ  ಮಾಡಿದ್ದಾರೆ. ಕಬ್ಬು ಬೆಳೆಗಾರರ ಬಾಕಿ ಹಣವನ್ನು ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ನಿಗದಿತ ಕಾಲಮಿತಿ ಸೂಚಿಸಿ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ರೈತರ ಸಮಸ್ಯೆಗೆ ಪರಿಹಾರ ಒದಗಿಸಿ ಎಂದು ಗೌಡರು ಸಲಹೆ ಮಾಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ರೈತರ ಕುರಿತಾದ ಹೇಳಿಕೆಗಳನ್ನು ನೀಡದಂತೆ ಗೌಡರು, ಕುಮಾರಸ್ವಾಮಿಗೆ ಕಿವಿಮಾತು ಹೇಳಿದ್ದಾರೆ. ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ರೈತರಿಗೆ ಅನುಕೂಲಕರವಾದ ಕೆಲಸ ಮಾಡದಿದ್ದರೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ರೈತರು ಪ್ರತಿಭಟನೆ ತೀವ್ರಗೊಳಿಸುವ ಸಾಧ್ಯತೆಗಳಿವೆ. ಅಲ್ಲದೆ, ವಿರೋಧ ಪಕ್ಷಗಳು ಇದೇ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬಹುದು. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ರೈತರ ಸಮಸ್ಯೆಗಳನ್ನು ಆದ್ಯತೆ ಮೇಲೆ ಬಗೆಹರಿಸಲು ಕ್ರಮಕೈಗೊಳ್ಳುವಂತೆ ಗೌಡರು ಸಲಹೆ ಮಾಡಿದ್ದಾರೆ.

ರೈತರ ಪರವಾಗಿ ಸರ್ಕಾರ ಕೈಗೊಳ್ಳುತ್ತಿರುವ ಕಾರ್ಯಕ್ರಮಗಳಿಗಿಂತ ಇಂತಹ ವಿಚಾರಗಳೇ ಹೆಚ್ಚು ಪ್ರಚಾರ ಪಡೆಯುತ್ತಿವೆ. ಇನ್ನು ಮುಂದೆ ಸಣ್ಣಪುಟ್ಟ ವಿವಾದಕ್ಕೂ ಅವಕಾಶ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಕಿವಿಮಾತು ಹೇಳಿದ್ದಾರೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin