ಸಂಪುಟದಲ್ಲಿ ರಾಮಲಿಂಗಾರೆಡ್ಡಿಗೆ ಅವಕಾಶ ನೀಡುವಂತೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Ramalinga Reddyಬೆಂಗಳೂರು, ಡಿ.7- ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್‍ನ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಅವಕಾಶ ನೀಡಬೇಕೆಂದು ನಗರ ಕಾಂಗ್ರೆಸ್‍ನ ಹಲವು ಮುಖಂಡರು ಹೈಕಮಾಂಡನ್ನು ಆಗ್ರಹಿಸಿದ್ದಾರೆ.ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ ಅವರನ್ನು ಕೈ ಬಿಟ್ಟಿರುವುದಕ್ಕೆ ಕಾರ್ಯಕರ್ತರಲ್ಲಿ ಪಕ್ಷದ ಬಗ್ಗೆ ದೊಡ್ಡ ಅಸಮಾಧಾನವಿದೆ.

ಬಿಜೆಪಿಯ ಭದ್ರಕೋಟೆಯಾಗಿದ್ದ ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗತವೈಭವ ಮರಳಲು ರಾಮಲಿಂಗಾರೆಡ್ಡಿ ಕಾರಣಕರ್ತರಾಗಿದ್ದರು. ಪಕ್ಷದ ಹೈಕಮಾಂಡ್ ಈಗಲಾದರೂ ಎಚ್ಚೆತ್ತುಕೊಂಡು ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ನಗರದ ಹಲವು ಕಾಂಗ್ರೆಸ್ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡದೇ ಇರುವುದು ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಉಂಟು ಮಾಡಿದೆ. ಬೆಂಗಳೂರು ಮಹಾನಗರದ ಕಾಂಗ್ರೆಸ್‍ನ ನಾಡಿ ಮಿಡಿತ ಅರಿತಿರುವ ಸಜ್ಜನ ರಾಜಕಾರಣಿಯೂ ಆದ ರಾಮಲಿಂಗಾರೆಡ್ಡಿ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡರೆ ಪಕ್ಷಕ್ಕೆ ಅನುಕೂಲವಾಗುತ್ತದೆ.
ಹತ್ತು ವರ್ಷಕಾಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಏಳು ಬಾರಿ ಶಾಸಕರಾಗಿರುವ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಉತ್ತಮ ಒಡನಾಟ ಹೊಂದಿದ್ದಾರೆ.

ಪಕ್ಷ ಸಂಘಟನೆಯಲ್ಲೂ ಕೂಡ ಬಹುಮುಖ್ಯ ಪಾತ್ರ ವಹಿಸಿರುವ ಅವರು ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯುವಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಡಿ.22ರಂದು ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಹಿರಿಯರಿಗೆ ಆದ್ಯತೆ ನೀಡುವುದಾದರೆ ರಾಮಲಿಂಗಾರೆಡ್ಡಿ ಅವರನ್ನು ಮೊದಲು ಪರಿಗಣಿಸಬೇಕೆಂದು ಮುಖಂಡರು ಆಗ್ರಹಿಸಿದ್ದಾರೆ.

Facebook Comments