ಸಂಕ್ರಾಂತಿ ಹಬ್ಬದ ನಂತರ ಜೆಡಿಎಸ್ ಶಾಸಕರಿಗೆ ನಿಗಮ-ಮಂಡಳಿಗಳ ಹಂಚಿಕೆ

ಈ ಸುದ್ದಿಯನ್ನು ಶೇರ್ ಮಾಡಿ

h dಬೆಂಗಳೂರು, ಜ.11-ಮಕರ ಸಂಕ್ರಾಂತಿ ಹಬ್ಬದ ನಂತರ ಜೆಡಿಎಸ್ ಶಾಸಕರನ್ನು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡಲು ಉದ್ದೇಶಿಸಲಾಗಿದೆ. ಶಾಸಕರು ಹಾಗೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಅಭ್ಯರ್ಥಿಗಳಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಲ್ಲಿ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈಗಾಗಲೇ ರಾಜಕೀಯ ಹಾಗೂ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೆ ಶಾಸಕರನ್ನು ಅಂತಿಮಗೊಳಿಸಲಾಗುತ್ತಿದೆ. ಒಬ್ಬರನ್ನು ಸಂಸದೀಯ ಕಾರ್ಯದರ್ಶಿ ಹುದ್ದೆಗೆ ಹಾಗೂ ನಾಲ್ವರು ಶಾಸಕರನ್ನು ರಾಜಕೀಯ ಕಾರ್ಯದರ್ಶಿಗಳ ಹುದ್ದೆಗೆ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಒಂದೇ ಕಂತಿನಲ್ಲಿ 30 ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳಿಗೆ ಶಾಸಕರು ಹಾಗೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಸದಸ್ಯ ಸ್ಥಾನಗಳನ್ನು ನೀಡಲು ಉದ್ದೇಶಿಸಲಾಗಿದೆ.

ಇತ್ತೀಚೆಗೆ ನಡೆದ ಜೆಡಿಎಸ್‍ನ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿಗಮ ಮಂಡಳಿ ನೇಮಕ ಮಾಡಲು ಶಾಸಕರು ಮತ್ತು ಮುಖಂಡರನ್ನು ಆಯ್ಕೆ ಮಾಡುವ ಅಧಿಕಾರವನ್ನು ದೇವೇಗೌಡರಿಗೆ ನೀಡಲಾಗಿತ್ತು. ಗೌಡರು ಪಕ್ಷದ ಮುಖಂಡರೊಂದಿಗೆ ಸಮಾಲೋಚಿಸಿ ನಾಮನಿರ್ದೇಶನ ಮಾಡಲಿರುವ ಶಾಸಕರು ಮತ್ತು ಪಕ್ಷದ ಮುಖಂಡರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

Facebook Comments