ಮಂಡ್ಯ ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಮಿಂಚಿನ ‘ಸಂಚಲನ’

ಈ ಸುದ್ದಿಯನ್ನು ಶೇರ್ ಮಾಡಿ

Mandya--01

ಮಂಡ್ಯ, ಜ.12- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ರಾಜಕೀಯ ವಲಯದಲ್ಲಿ ಮಿಂಚಿನ ಸಂಚಲನ ಮೂಡಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕೆಂಬ ಅಭಿಮಾನಿಗಳ ಒತ್ತಾಯದ ಬೆನ್ನಲ್ಲೆ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಸಕ್ಕರೆ ನಾಡು ಜೆಡಿಎಸ್ ಭದ್ರಕೋಟೆ ಎಂಬುದು ಈಗಾಗಲೇ ಸಾಬೀತಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದವರು ಸ್ಪರ್ಧಿಸಲಿ ಎಂಬುದು ಅಭಿಮಾನಿಗಳ ಒತ್ತಾಯವಾಗಿದೆ.

ಕಳೆದ ಉಪಚುನಾವಣೆ ಸಂದರ್ಭದಲ್ಲೂ ಇದೇ ರೀತಿಯ ಒತ್ತಾಯ ಬಂದಿತ್ತು. ಆಗ ಸ್ಥಳೀಯರಾದ ಸಂಸದ ಎಲ್.ಆರ್.ಶಿವರಾಮೇಗೌಡ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸಬೇಕೆಂಬ ನಿರ್ಧಾರ ಆಗದಿದ್ದರೂ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕೆಂಬ ಒತ್ತಡ ತೀವ್ರವಾಗಿದೆ.

ಇದಕ್ಕೆ ಪೂರಕವೆಂಬಂತೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ರಾಜಕೀಯ ಪ್ರವೇಶದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ಅಲ್ಲದೆ, ಜೆಡಿಎಸ್ ಪರವಾಗಿ ಕೆಲಸ ಮಾಡಲು ಸಿದ್ಧವಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿಯೂ ಹೇಳಿದ್ದಾರೆ.

ಅಲ್ಲದೆ, ನನಗೆ ಚಿತ್ರರಂಗದಲ್ಲಿ ವರನಟ ಡಾ.ರಾಜ್ ಕುಮಾರ್ ಅವರು ಸ್ಫೂರ್ತಿಯಾಗಿದ್ದಾರೆ. ಚಿತ್ರರಂಗದಲ್ಲೂ ಇರುತ್ತೇನೆ. ರಾಜಕೀಯಕ್ಕೆ ಬರುವ ವಿಚಾರವಾಗಿ ನನ್ನ ಬಳಿ ಉತ್ತರವಿಲ್ಲ ಎನ್ನುವ ಮೂಲಕ ವರಿಷ್ಠರೇ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‍ನ ಜೆಡಿಎಸ್ ಮುಖಂಡರು ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರಿಗೆ ಮನವಿ ಸಲ್ಲಿಸಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಸುವಂತೆ ಕೋರಿದ್ದಾರೆ. ಇದಕ್ಕೆ ಇಂಬು ನೀಡುವಂತೆ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

Facebook Comments

Sri Raghav

Admin