ಸಾರಕ್ಕಿ ಕೆರೆ ಅಭಿವೃದ್ಧಿಗೆ 10 ಕೋಟಿ ಹೆಚ್ಚುವರಿ ಅನುದಾನಕ್ಕೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

sakkareಬೆಂಗಳೂರು, ಜ.23- ಒಂಭತ್ತು ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿರುವ ಸಾರಕ್ಕಿ ಕೆರೆಗೆ ಇನ್ನೂ 10 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಹೇಳಿದ್ದಾರೆ.

ಜೆಪಿ ನಗರದ ಸಾರಕ್ಕಿ ಕೆರೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಪಿ ನಗರದ ಹೃದಯ ಭಾಗದಲ್ಲಿರುವ ಸಾರಕ್ಕಿ ಕೆರೆ ಒತ್ತುವರಿಯಾಗಿರುವುದರಿಂದ ಹಾಗೂ ಕಲುಷಿತ ನೀರು ಸೇರ್ಪಡೆಗೊಳ್ಳುತ್ತಿರುವುದರಿಂದ ತನ್ನ ಸೌಂದರ್ಯವನ್ನು ಕಳೆದುಕೊಂಡಿದೆ ಎಂದು ಹೇಳಿದರು.

ಈ ಭಾಗದ ಜನತೆಗೆ ಒಳ್ಳೆಯ ಪರಿಸರ, ಅಂತರ್ಜಲ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಾರಕ್ಕಿ ಕೆರೆಯಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಕೊಳಚೆ ನೀರು ಕೆರೆಗೆ ಹರಿದು ಬರುವುದನ್ನು ಸಂಪೂರ್ಣ ನಿಯಂತ್ರಿಸಲಾಗಿದೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಮಳೆ ನೀರು ಕೆರೆಗೆ ಹರಿದು ಬರಲು ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲ ಕಾಮಗಾರಿಗಳು ಇನ್ನು ಎರಡು ತಿಂಗಳಲ್ಲಿ ಮುಗಿಯಬೇಕಾಗಿದೆ. ಅದಕ್ಕಾಗಿ 10 ಕೋಟಿ ರೂ. ಹೆಚ್ಚಿನ ಅನುದಾನದ ಅವಶ್ಯಕತೆಯಿದ್ದು, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು. ಕೆರೆ ಪರಿಶೀಲನೆ ವೇಳೆ ಬೊಮ್ಮನಹಳ್ಳಿ ವಾರ್ಡ್ ಬಿಬಿಎಂಪಿ ಸದಸ್ಯ ರಾಮ್ ಮೋಹನ್ ರಾಜ್ ಹಾಗೂ ಪಾಲಿಕೆ ಅಧಿಕಾರಿಗಳು ಹಾಜರಿದ್ದರು.

Facebook Comments