ತೀವ್ರ ಎದೆನೋವು ಹಿನ್ನೆಲೆಯಲ್ಲಿ ವೈ.ಎಸ್.ವಿ.ದತ್ತ ಆಸ್ಪತ್ರೆಗೆ ದಾಖಲು
ಬೆಂಗಳೂರು,ಜ.24- ತೀವ್ರ ಎದೆನೋವು ಹಿನ್ನೆಲೆಯಲ್ಲಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಚೇತರಿಸಿಕೊಳ್ಳುತ್ತಿದ್ದಾರೆ.
ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ದತ್ತ ಅವರಿಗೆ ಈ ಹಿಂದೆ ಸ್ಟಂಟ್ ಅಳವಡಿಸಲಾಗಿತ್ತು. ಕಳೆದ ಮಂಗಳವಾರ ಆಟೋದಲ್ಲಿ ಬರುತ್ತಿದ್ದಾಗ ಜೆಡಿಎಸ್ ಕಚೇರಿ ಬಳಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇತ್ತೀಚೆಗೆ ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ದತ್ತ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಪ್ರಕಟಿಸಿದ್ದರು.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದತ್ತ ಅವರಿಗೆ ಜೆಡಿಎಸ್ ಪಕ್ಷದ ಪ್ರಚಾರದ ಹೊಣೆಗಾರಿಕೆಯನ್ನು ನೀಡಲಾಗಿದೆ. ದತ್ತ ಅವರು ಜೆಡಿಎಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡುತ್ತಾ ಬಂದಿದ್ದಾರೆ. ಅಲ್ಲದೆ ಪಕ್ಷದ ಕಾರ್ಯಕರ್ತರು, ಮುಖಂಡರಿಗೂ ಚಿರಪರಿಚಿತರಾಗಿದ್ದು, ಸಮನ್ವಯತೆ ಕಾಪಾಡಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ವರಿಷ್ಠರಿಗಿದೆ.