ಬ್ಲಾಕ್‍ಮೆಲ್ ರಾಜಕಾರಣ ಮಾಡುತ್ತಿರುವ ಸಿಎಂ ರಾಜೀನಾಮೆ ನೀಡಬೇಕು : ಶ್ರೀರಾಮುಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.12- ವಿವಾದಿತ ಧ್ವನಿಸುರುಳಿ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿಡುಗಡೆ ಮಾಡಿದ ಧ್ವನಿ ಸುರುಳಿಯಲ್ಲಿ ಹುರುಳಿಲ್ಲ. ಸಿಎಂ ಸೇಡಿನ ಹಾಗೂ ಬ್ಲಾಕ್‍ಮೆಲ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಆರೋಪ ಬಂದಾಗ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದೇ ರೀತಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ವಹಿಸಬೇಕು.

ಧ್ವನಿ ಸುರುಳಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸುವುದನ್ನು ಬಿಜೆಪಿ ವಿರೋಧಿಸಿದೆ. ಎಸ್‍ಐಟಿ ಮುಖ್ಯಮಂತ್ರಿ ಅಧೀನಕ್ಕೆ ಬರುವುದರಿಂದ ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದರು.

ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ನ್ಯಾಯಾಂಗ ತನಿಖೆಗೆ ವಹಿಸಲಾಗಿತ್ತು ಎಂದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸಭಾಧ್ಯಕ್ಷರು ಹಾಗೂ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

Facebook Comments

Sri Raghav

Admin