ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ, ಸಭೆ ಮೇಲೆ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.18- ಆಪರೇಷನ್ ಕಮಲ ವಿಫಲವಾದ ನಂತರ ನಿರಾಳವಾಗಿರುವ ಕಾಂಗ್ರೆಸ್ ನಾಯಕರು ಲೋಕಸಭೆ ಚುನಾವಣೆ ತಯಾರಿಗಾಗಿ ಸರಣಿ ಸಭೆಗಳನ್ನು ಆರಂಭಿಸಿದ್ದಾರೆ. ಇಂದು ಮೂರು ಹಂತದಲ್ಲಿ ಪ್ರಮುಖ ಸಭೆಗಳನ್ನು ಆಯೋಜಿಸಲಾಗಿದ್ದು, ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಪ್ರಚಾರ ಸಮಿತಿ ಸಭೆ, ಮಧ್ಯಾಹ್ನ ಕೆಪಿಸಿಸಿ ಸಮನ್ವಯ ಸಮಿತಿ ಸಭೆ ಹಾಗೂ ಸಂಜೆ ಚುನಾವಣಾ ಸಮಿತಿ ಸಭೆಗಳು ಆಯೋಜನೆಗೊಂಡಿವೆ.

ಕಾಂಗ್ರೆಸ್‍ನ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ನೇತೃತ್ವದ ಪ್ರಚಾರ ಸಮಿತಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ, ಸಚಿವ ಯು.ಟಿ.ಖಾದರ್, ಮುಖಂಡ ಬಿ.ಎಲ್.ಶಂಕರ್ ಹಾಗೂ ಎಐಸಿಸಿ ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಸಿದ್ದರಾಮಯ್ಯ ಸರ್ಕಾರದ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಲು ಕಾಂಗ್ರೆಸ್ ವಿಫಲವಾಗಿದ್ದರಿಂದಾಗಿ ಕಳೆದ ಚುನಾವಣೆಯಲ್ಲಿ ಸೋಲು ಕಂಡಿದೆ. ಯುಪಿಎ ಸರ್ಕಾರದ ಕಾರ್ಯಕ್ರಮಗಳು ಹಾಗೂ ಸಿದ್ದರಾಮಯ್ಯ ಸರ್ಕಾರದ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದರೆ ಮಾತ್ರ ನಾವು ಜನರನ್ನು ತಲುಪಲು ಸಾಧ್ಯ.

ಹೀಗಾಗಿ ಮುಂದಿನ ಚುನಾವಣೆಗೆ ಮಾಧ್ಯಮಗಳನ್ನು ಉತ್ತಮವಾಗಿ ಬಳಸಿಕೊಂಡು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಸಭೆಯಲ್ಲಿ ಚರ್ಚಿಸಲಾಗಿದೆ.ಮಧ್ಯಾಹ್ನ ಪಕ್ಷದ ಸಮನ್ವಯ ಸಮಿತಿ ಆಯೋಜಿಸಿದ್ದು, ಇದರಲ್ಲಿ ಪಕ್ಷದ ನಾಯಕರ ನಡುವೆ ಅಲ್ಲಲ್ಲಿ ಕಂಡುಬಂದಿರುವ ಭಿನ್ನಮತಗಳನ್ನು ಸರಿದೂಗಿಸಿ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡುವಂತೆ ಸಮನ್ವಯತೆ ಸಾಧಿಸುವ ಕುರಿತು ಚರ್ಚೆ ನಡೆಯಲಿದೆ.

ಈವರೆಗೂ ಕಾಂಗ್ರೆಸ್ ಮುಖಂಡರ ನಡುವೆ ಮಾತ್ರ ಸಮನ್ವಯ ಸಾಧಿಸಬೇಕಿದ್ದು, ಈಗ ಹೊಸದಾಗಿ ಜೆಡಿಎಸ್ ಜತೆಗೂ ಸಮನ್ವಯ ಸಾಧಿಸಬೇಕಿದೆ. ಈ ಬಾರಿಯ ಸಮನ್ವಯ ಸಮಿತಿಯ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ.

ಈ ಎಲ್ಲಾ ಅಂಶಗಳನ್ನು ಸಮಿತಿಯಲ್ಲಿ ಚರ್ಚೆ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.ಸಂಜೆ ಚುನಾವಣಾ ಸಮಿತಿ ಸಭೆ ನಡೆಯಲಿದ್ದು,ಇದು ಲೋಕಸಭೆ ಚುನಾವಣೆ ಮಟ್ಟಿಗೆ ಕಾಂಗ್ರೆಸ್ ಕರ್ನಾಟಕದಲ್ಲಿ ಮೊದಲ ಬಾರಿಗೆ ನಡೆಸುತ್ತಿರುವ ಸಭೆಯಾಗಿದೆ.

ಇದರಲ್ಲಿ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತದೆ. ಜತೆಗೆ ಜೆಡಿಎಸ್-ಕಾಂಗ್ರೆಸ್ ನಡುವಿನ ಮೈತ್ರಿಯ ಸಂಬಂಧವಾಗಿಯೂ ಚರ್ಚೆ ನಡೆಯಲಿದೆ.

ಜೆಡಿಎಸ್ 12 ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬೇಡಿಕೆ ಇಟ್ಟಿದ್ದು, ಕಾಂಗ್ರೆಸ್ ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಹೊರತು ಪಡಿಸಿ 8 ಕ್ಷೇತ್ರಗಳನ್ನು ಬಿಟ್ಟುಕೊಡಲು ಸಿದ್ದವಿದೆ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

Facebook Comments