ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಫೆ.19- ಹಲವು ವಿರೋಧಾಭಾಸಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಬಿಜೆಪಿ ಇದೀಗ ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ಜೊತೆ ಮೈತ್ರಿ ಸಾಧಿಸಿದೆ.

ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ, ಎಐಎಡಿಎಂಕೆ ಮುಖಂಡ ಪನೀರ್ ಸೆಲ್ವಂ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಪ್ರತಿಪಕ್ಷ ಡಿಎಂಕೆ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸುತ್ತಿರುವ ಸಂದರ್ಭದಲ್ಲಿ ಎಐಎಡಿಎಂಕೆ-ಬಿಜೆಪಿ- ಪಿಎಂಕೆ-ಡಿಎಂಡಿಕೆ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ.

ರಾಜ್ಯದ ಒಟ್ಟು 39 ಲೋಕಸಭಾ ಕ್ಷೇತ್ರಗಳ ಪೈಕಿ ಎಐಎಡಿಎಂಕೆ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಬಿಜೆಪಿ 10ರಿಂದ 12 ಉಳಿದ ಕ್ಷೇತ್ರಗಳಲ್ಲಿ ಪಿಎಂಕೆ, ಡಿಎಂಕೆ ಸ್ಪರ್ಧಿಸಲಿವೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿ ಒಂದೇ ಒಂದು ಕ್ಷೇತ್ರವನ್ನು ಗೆದ್ದಿತ್ತು. ಎಐಎಡಿಎಂಕೆಯ ಅಧಿನಾಯಕಿ ಜಯಲಲಿತ ಹಠಾತ್ ನಿಧನರಾದ ನಂತರ ಪಕ್ಷದಲ್ಲಿ ಯಾರೊಬ್ಬರಿಗೂ ಹಿಡಿತ ಸಾಧಿಸಲು ಸಾಧ್ಯವಾಗಿಲ್ಲ.

ಪ್ರತ್ಯೇಕವಾಗಿ ಬಿಜೆಪಿ ಸ್ಪರ್ಧಿಸಿದರೆ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಹೆಚ್ಚಿನ ಅನುಕೂಲವಾಗಬಹುದೆಂಬ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಎಐಎಡಿಎಂಕೆ ಕೈ ಜೋಡಿಸಿದೆ.  ದಕ್ಷಿಣ ಭಾರತದಲ್ಲಿ ಪಕ್ಷವನ್ನು ಸದೃಢಗೊಳಿಸಲು ಹವಣಿಸುತ್ತಿರುವ ಬಿಜೆಪಿಗೆ ಎಐಎಡಿಎಂಕೆ ಜೊತೆ ಮೈತ್ರಿ ಆನೆಬಲ ತಂದಿದೆ.

ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಕಳೆದ ಒಂದು ವಾರದಿಂದ ಪಕ್ಷದ ಮುಖಂಡರ ಜೊತೆ ಸರಣಿ ಸಭೆಗಳನ್ನು ನಡೆಸಿ ಮೈತ್ರಿ ಕುದುರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದುಬಂದಿದೆ. ಸಂಜೆ ವೇಳೆಗೆ ಪಕ್ಷದ ಮುಖಂಡರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಸೀಟು ಹಂಚಿಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

Facebook Comments

Sri Raghav

Admin