100 ಕೋಟಿ ವೆಚ್ಚದಲ್ಲಿ ಚಾಮುಂಡೇಶ್ವರಿ ಬೆಟ್ಟ ಅಭಿವೃದ್ಧಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.22-ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆಯಡಿ ಚಾಮುಂಡೇಶ್ವರಿ ದೇವಾಲಯದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮಂಜೂರಾಗಿರುವ 100 ಕೋಟಿ ರೂ.ಗಳಲ್ಲಿ 2 ಹಂತಗಳಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದರು.

ಈ ಕುರಿತಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರದಿಂದ ಚಾಮುಂಡೇಶ್ವರಿ ಬೆಟ್ಟದ ಹಲವು ಅಭಿವೃದ್ಧಿ ಕಾಮಗಾರಿಗಳಿಗಾಗಿ 100 ಕೋಟಿ ಮಂಜೂರಾಗಿದೆ.

ಈ ಹಿನ್ನೆಲೆಯಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಬೆಟ್ಟದ ಮೇಲಿರುವ ದೇವಿ ಕೆರೆ ಅಭಿವೃದ್ಧಿ ಹಾಗೂ ಮೆಟ್ಟಿಲ ಮೂಲಕ ತೆರಳುವ ದಾರಿಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಬೆಟ್ಟದ ಪಾದದಿಂದ 1001 ಮೆಟ್ಟಿಲುಗಳನ್ನು ಹತ್ತಿ ಬರುವ ದಾರಿಯಲ್ಲಿ ಕಾಡುಪ್ರಾಣಿಗಳ ಭೀತಿಯನ್ನು ಭಕ್ತರು ಎದುರಿಸುತ್ತಿದ್ದಾರೆ. ಇದಕ್ಕೆ ಸೂಕ್ತ ಕ್ರಮಕೈಗೊಳ್ಳಲು ಚಿಂತನೆ ನಡೆದಿದೆ.

ಅಲ್ಲದೆ ಬೆಟ್ಟಕ್ಕೆ ಬರುವ ವೃದ್ಧರಿಗೆ ಅನುಕೂಲ ಕಲ್ಪಿಸುವುದು ಸೇರಿದಂತೆ ಬೆಟ್ಟದ ಮೇಲಿನ ವ್ಯೂವ್ ಪಾಯಿಂಟ್ ಮೂಲಕ ಸುತ್ತಮುತ್ತಲ ಪ್ರದೇಶ ವೀಕ್ಷಿಸಲು ಅನುಕೂಲವಾಗುವಂತೆ ಹೆಚ್ಚಿನ ವ್ಯವಸ್ಥೆ ಕಲ್ಪಿಸುವುದು, ಮಹಿಷಾಸುರ ವೃತ್ತದ ಬಳಿ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳುವ ಚಿಂತನೆ ನಡೆದಿದ್ದು, ಈ ಎಲ್ಲಾ ಕಾಮಗಾರಿಗಳಿಗಾಗಿ ಮೊದಲ ಹಂತದಲ್ಲಿ 50 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತದೆ. 2ನೇ ಹಂತದಲ್ಲಿ ಮತ್ತೆ 50 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಚುನಾವಣಾ ನೀತಿ ಸಂಹಿತೆ ಜಾರಿಗೂ ಮುನ್ನವೇ ಕಾಮಗಾರಿ ಆರಂಭಿಸುವುದರಿಂದ ಚುನಾವಣೆಗೂ- ಅಭಿವೃದ್ಧಿ ಕಾಮಗಾರಿಗೂ ಯಾವುದೇ ಸಂಬಂಧವಿರುವುದಿಲ್ಲ. ತುರ್ತು ಕಾಮಗಾರಿ ಆರಂಭಿಸುವ ಹಿನ್ನೆಲೆಯಲ್ಲಿ ನಾಳೆ 6.30ಕ್ಕೆ ಸ್ಥಳ ಪರಿಶೀಲನೆಯನ್ನೂ ಕೈಗೊಳ್ಳಲಾಗುತ್ತಿದೆ.

50 ಕೋಟಿ ರೂ. ವೆಚ್ಚದ ಮೊದಲ ಹಂತದ ಕಾಮಗಾರಿ ಕುರಿತಂತೆ ವರದಿಯನ್ನು ನಾಲ್ಕು ದಿನಗಳಲ್ಲಿ ಕೇಂದ್ರಕ್ಕೆ ಕಳುಹಿಸಲಾಗುತ್ತಿದ್ದು, ಈ ಕುರಿತ ರೂಪುರೇಷೆಗಳ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಿಶೇಷ ಹಬ್ಬ ಹರಿದಿನ ಸೇರಿದಂತೆ ಇನ್ನಿತರ ಸಂದರ್ಭದಲ್ಲಿ ಬೆಟ್ಟದ ಮಾರ್ಗದಲ್ಲಿ ಉಂಟಾಗುವ ಸಂಚಾರ ದಟ್ಟಣೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತಂತೆಯೂ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಸಂಸದ ಪ್ರತಾಪ್‍ಸಿಂಹ, ಸಚಿವ ಸಾ.ರಾ.ಮಹೇಶ್, ನಗರ ಪೊಲೀಸ್ ಆಯುಕ್ತ ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Facebook Comments