ಬಿಜೆಪಿ ಕಟ್ಟಿ ಹಾಕುವ ರಣತಂತ್ರಕ್ಕಾಗಿ ಫೆ.27 ವಿಪಕ್ಷಗಳ ಮಹತ್ವದ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಫೆ.22-ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ವಿರುದ್ಧ ಹೋರಾಟದ ರಚನಾತ್ಮಕ ರಣತಂತ್ರ ರೂಪಿಸಲು ಫೆ.27ರಂದು ರಾಜಧಾನಿ ದೆಹಲಿಯಲ್ಲಿ ವಿರೋಧಪಕ್ಷಗಳು ಮಹತ್ವದ ಸಭೆಯೊಂದನ್ನು ನಡೆಸಲಿದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಮೇಲೆ ನಡೆಯಲಿರುವ ಪ್ರತಿಪಕ್ಷಗಳ ಈ ಸಭೆ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿವೆ.

ಕಾಂಗ್ರೆಸ್ ಸೇರಿದಂತೆ ಆರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಫೆ.13ರಂದು ಲೋಕಸಭಾ ಸಮರದ ರಣತಂತ್ರ ರಚನೆ ಬಗ್ಗೆ ತೀರ್ಮಾನ ಕೈಗೊಂಡಿದ್ದರು. ಆನಂತರ ಸಾರ್ವತ್ರಿಕ ಚುನಾವಣೆಗಾಗಿ ಚುನಾವಣಾ-ಪೂರ್ವ ಮೈತ್ರಿಕೂಟ ಮತ್ತು ಸಾಮಾನ್ಯ ಕನಿಷ್ಠ ಕಾರ್ಯಕ್ರಮ(ಸಿಎಂಪಿ)ದ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಲಾಗಿತ್ತು.

ಫೆ.13ರಂದು ನಡೆದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್, ಟಿಡಿಪಿ ಪರಮೋಚ್ಚ ನಾಯಕ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ನ್ಯಾಷನಲ್ ಕಾನ್ಫೆರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಮತ್ತಿತರರು ಭಾಗವಹಿಸಿದ್ದರು.

ಫೆ.27ರಂದು ನಡೆಯುವ ಸಭೆಯಲ್ಲಿ ಈ ಎಲ್ಲ ನಾಯಕರು ಭಾಗವಹಿಸಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ರಣತಂತ್ರ ಮತ್ತು ರೂಪುರೇಷೆಗಳ ಬಗ್ಗೆ ಚರ್ಚಿಸಲಿದ್ದಾರೆ.

ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದ ಎಡಪಕ್ಷಗಳು ಪ್ರತಿಪಕ್ಷಗಳ ಈ ಮಹತ್ವದ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇಲ್ಲ.

Facebook Comments