ಕರ್ನೂಲ್ ಬಳಿ ಅಪಘಾತಕ್ಕೀಡಾಗಿದ್ದ ಮಂಡ್ಯ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.23- ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಓರ್ವಕಲ್ ಬಳಿ ಅಪಘಾತಕ್ಕೀಡಾಗಿದ್ದ ಮಂಡ್ಯ ಜಿಲ್ಲೆಯ ಬೆಳ್ಳೂರು ಗ್ರಾಮದ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಧ್ಯಪ್ರವೇಶದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಪ್ರವಾಸಿಗರು ಸುರಕ್ಷಿತವಾಗಿ ವಾಪಸ್ ಮರಳುವಂತಾಗಿದೆ. ಬೆಳ್ಳೂರು ಗ್ರಾಮಸ್ಥರು ಫೆ.18ರಂದು ಬಸ್‍ನಲ್ಲಿ ಪ್ರವಾಸಕ್ಕೆ ತೆರಳಿದ್ದರು.

ಮಹಾನಂದಿ ದರ್ಶನ ಪಡೆದು ಮಂತ್ರಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಅಪಘಾತ ಸಂಭವಿಸಿತ್ತು.  ಘಟನೆಯಲ್ಲಿ ಗೋವಿಂದಸ್ವಾಮಿ ಎಂಬುವರು ಮೃತಪಟ್ಟು, ಇತರೆ ಮೂರು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ಫಕೀರಪ್ಪ ಕಾಗಿನೆಲೆ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪರ್ಕಿಸಿ, ಮಂಡ್ಯ ಜಿಲ್ಲೆಯ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕಳುಹಿಸುವಂತೆ ಮನವಿ ಮಾಡಿದ್ದರು. ಅದರಂತೆ ಆ ಪೊಲೀಸ್ ಅಧಿಕಾರಿ ಬಸ್ ವ್ಯವಸ್ಥೆ ಮಾಡಿ ಮಂಡ್ಯ ಜಿಲ್ಲೆಯ ಪ್ರವಾಸಿಗರನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Facebook Comments