ಮಂಡ್ಯದಲ್ಲಿ ನಿಖಿಲ್ ಗೆಲುವಿಗೆ ಪ್ಲಾನ್, ಡಿಕೆಶಿ ಜೊತೆ ಎಚ್‍ಡಿಕೆ ಮಾತುಕತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.16- ಲೋಕಸಭೆ ಚುನಾವಣೆ ಕಾರ್ಯತಂತ್ರ ರೂಪಿಸುವ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಮಹತ್ವದ ಮಾತುಕತೆ ನಡೆಸಿದ್ದಾರೆ. ನಿನ್ನೆ ಬೆಳಗ್ಗೆ ಖಾಸಗಿ ಹೊಟೇಲ್‍ನಲ್ಲಿ ಮುಖ್ಯಮಂತ್ರಿಯನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚುನಾವಣೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಮುಖ್ಯಮಂತ್ರಿಯವರ ಪುತ್ರ ಮತ್ತು ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲಾಗಿದೆ.

ಜೆಡಿಎಸ್ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ರೂಪಿಸಬೇಕಾದ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ಮನವೊಲಿಸುವುದು, ನಿಖಿಲ್ ಪರವಾಗಿ ಚುನಾವಣೆಯಲ್ಲಿ ಕಾರ್ಯನಿರ್ವಹಿಸಲು ಬೇಕಾದ ರೂಪುರೇಷೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವ ಅಂಬರೀಶ್ ಅವರ ಪತ್ನಿ, ನಟಿ ಸುಮಲತಾ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಎದುರಾಗುವ ಅಡೆತಡೆಗಳ ಬಗ್ಗೆಯೂ ಗಂಭೀರ ಚರ್ಚೆ ನಡೆಸಿ ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಯಾವ ಯಾವ ರೀತಿ ಕಾರ್ಯತಂತ್ರಗಳನ್ನು ರೂಪಿಸಬೇಕೆಂಬ ಬಗ್ಗೆ ಸಮಾಲೋಚನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದ ಸಚಿವ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯನ್ನು ನಾವು ಭೇಟಿ ಮಾಡದೆ ಇನ್ನ್ಯಾರು ಭೇಟಿ ಮಾಡುತ್ತಾರೆಂದಷ್ಟೇ ಹೇಳಿದರು.

Facebook Comments