ಶಾಸಕ ಬಿ.ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿ ಸೇರ್ಪಡೆ…!

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ,ಮಾ.19- ಕಳೆದ ಲೋಕಸಭೆ ಉಪ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಗೆದ್ದು ಬೀಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಬಿಗ್‍ಶಾಕ್! ಪಕ್ಷದ ಗೆಲುವಿಗೆ ಕಾಂಗ್ರೆಸ್‍ನ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಪ್ರಮುಖ ಪಾತ್ರ ವಹಿಸಿದ್ದರು. ಈಗ ಅವರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿಯಿಂದ ಬಳ್ಳಾರಿ ಲೊಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಕಾಂಗ್ರೆಸ್‍ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿಯೇ ವೆಂಕಟೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ಪಕ್ಷದಿಂದಲೇ ಟಿಕೆಟ್ ನೀಡಬೇಕಾಗಿತ್ತು. ಆದರೆ ಉಸ್ತುವಾರಿ ಸಚಿವರಾಗಿದ್ದ ಡಿ.ಕೆ. ಶಿವ ಕುಮಾರ್ ಅವರ ಸಲಹೆಯಂತೆಉಗ್ರಪ್ಪ ಅವರನ್ನು ಕಣಕ್ಕಿಳಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಾಗಿತ್ತು.

ಚುನಾವಣೆ ಸಂದರ್ಭದಲ್ಲಿ ನೀಡಿದ ವಾಗ್ದಾನದಂತೆ ಬಿ.ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಅತೃಪ್ತಗೊಂಡು ಪಕ್ಷ ತೊರೆಯಲು ಮುಂದಾಗಿದ್ದರು. ಆದರೆ ಕಾನೂನು ತೊಡಕು ಎದುರಾಗಿತ್ತು.

ಈಗ ಅವರ ಸಹೋದರ ವೆಂಕಟೇಶ್ ಪ್ರಸಾದ್ ಅವರು ಬಿಜೆಪಿ ಸೇರುತ್ತಿದ್ದು, ಅವರನ್ನು ಬಳ್ಳಾರಿ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸಿ ಪರೋಕ್ಷ ಸಹಕಾರ ನೀಡಲು ತಯಾರಿ ನಡೆಸಿರುವುದು ಕಾಂಗ್ರೆಸಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

ಇಂದು ಬೆಳಗ್ಗೆ 11 ಗಂಟೆಗೆ ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಶಾಸಕ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.  ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕ್ಷಾಂಕಿಯಾಗಿದ್ದ ವೆಂಕಟೇಶ್ ಪ್ರಸಾದ್, ಈ ಬಾರಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್‍ಗೆ ತಿರುಗೇಟು ನೀಡಲು ಮುಂದಾಗಿದ್ದಾರೆ.

ಬಂಡಾಯ ಶಾಸಕರಲ್ಲಿ ಗುರುತಿಸಿಕೊಂಡಿದ್ದ ನಾಗೇಂದ್ರ ವಿರುದ್ಧ ಪಕ್ಷದ ವಿಪ್ ಉಲ್ಲಂಘಿಸಿದ್ದರಿಂದ ಕಾಂಗ್ರೆಸ್ ಸ್ಪೀಕರ್ ಗೆ ದೂರು ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಕಮಲ ಹಿಡಿಯಲು ಹಿಂದೇಟು ಹಾಕಿದ್ದು, ಪರ್ಯಾಯವಾಗಿ ಸೋದರನನ್ನು ಬಿಜೆಪಿ ಸೇರಿಸುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಬಂಡಾಯ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದೂವರೆಗೂ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲಾವಕಾಶ ತೆಗೆದುಕೊಂಡು ಶಾಸಕ ನಾಗೇಂದ್ರ ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )