ಧಾರವಾಡ ಕಟ್ಟಡ ದುರಂತ : ಸಂಜೆ ಸಿಎಂ ಭೇಟಿ, ಪರಿಹಾರ ಘೋಷಿಸಿದ ಜಿಲ್ಲಾಧಿಕಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.21- ಧಾರವಾಡದ ಕುಮಾರೇಶ್ವರ ನಗರದಲ್ಲಿ ಬಹುಮಹಡಿ ಕಟ್ಟಡ ಕುಸಿದು ದುರಂತ ಸಂಭವಿಸಿದ ಸ್ಥಳಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಕಳೆದ ಮಂಗಳವಾರ ಮಧ್ಯಾಹ್ನ ಕುಮಾರೇಶ್ವರ ನಗರದ ಬಸ್ ನಿಲ್ದಾಣದ ಬಳಿ ಇರುವ ನಾಲ್ಕು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದುಬಿದ್ದು ಸುಮಾರು 10 ಜನ ಸಾವನ್ನಪ್ಪಿ 60ಕ್ಕೂ ಹೆಚ್ಚು ಜನ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ತಂಡಗಳಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಹಲವರನ್ನು ರಕ್ಷಿಸಲಾಗಿದೆ. ಜಗದೀಶ್ ಶೆಟ್ಟರ್, ವಿನಯ್ ಕುಲಕರ್ಣಿ, ಬಸವರಾಜ ಹೊರಟ್ಟಿ, ಕೋನರೆಡ್ಡಿ ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘಟನೆ ನಡೆದ ಕೂಡಲೇ ಅಧಿಕಾರಿಗಳಿಗೆ ಸೂಚನೆ ನೀಡಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸಬೇಕೆಂದು ಹೇಳಿದ್ದರು. ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿ ದೀಪಾ ಚೋಳನ್, ಪೊಲೀಸ್ ಆಯುಕ್ತ ನಾಗರಾಜ್ ಸೇರಿದಂತೆ ಹಲವರು ಸ್ಥಳದಲ್ಲಿ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಸ್ವಯಂಸೇವಕರು, ಸ್ಥಳೀಯ ನಾಗರಿಕರು ಕೂಡ ಅವಶೇಷಗಳಡಿ ಸಿಲುಕಿರುವವರನ್ನು ಹೊರತರುವ ಪ್ರಯತ್ನಕ್ಕೆ ಕೈ ಜೋಡಿಸಿದ್ದಾರೆ.  ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನೆರವೇರಿಸುವಂತೆ ಸೂಚಿಸಿದ್ದರು.

ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಕ್ಷಣದ ಪರಿಹಾರವಾಗಿ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂ. ಮತ್ತು ಅಂತ್ಯಸಂಸ್ಕಾರಕ್ಕೆ 5 ಸಾವಿರ ರೂ. ನೀಡುವುದಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin