ಅಂಜನಮೂರ್ತಿ ಅವರಿಗೆ ನೆಲಮಂಗಲ ಟಿಕೆಟ್ ಕೈ ತಪ್ಪಿದಕ್ಕೆ ಕಾರ್ಯಕರ್ತರ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

Anjanamurthy--01

ನೆಲಮಂಗಲ, ಏ.16- ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸಿರುವ ಮಾಜಿ ಸಚಿವ ಹಾಗೂ ಮಾಜಿ ಉಪ ಸಭಾಪತಿಯೂ ಆಗಿದ್ದ ಅಂಜನಮೂರ್ತಿ ಅವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಕ್ಷೇತ್ರದ ಜನತೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಕ್ಕೇ ಸಿಗಲಿದೆ ಎಂಬ ಭರವಸೆ ಹೊಂದಿದ್ದ ಅಂಜನಮೂರ್ತಿ ಅವರಿಗೆ ಕೊನೆ ಕ್ಷಣದಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಮಾಜಿ ಮೇಯರ್ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಘೋಷಣೆಯಾಗಿರುವುದಕ್ಕೆ ಭಾರೀ ಅಸಮಾಧಾನ ವ್ಯಕ್ತವಾಗಿದೆ.

ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಅಂಜನಮೂರ್ತಿ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿರುವ ವಿಷಯ ತಿಳಿಯುತ್ತಿದ್ದಂತೆ ಕಾರ್ಯಕರ್ತರು ರಾತ್ರಿ ತುರ್ತು ಸಭೆ ನಡೆಸಿ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಸೊಂಡೆಕೊಪ್ಪ ಸರ್ಕಲ್‍ನಲ್ಲಿ ಕಾರ್ಯಕರ್ತರು, ಅಂಜನಮೂರ್ತಿ ಅವರ ಅಪಾರ ಅಭಿಮಾನಿಗಳು, ಬೆಂಬಲಿಗರು ಜಮಾಯಿಸಿ ಯಾವುದೇ ಕಾರಣಕ್ಕೂ ಬೆಂಗಳೂರಿನಿಂದ ನಾರಾಯಣಸ್ವಾಮಿ ಅವರಿಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು. ಹೈ ಕಮಾಂಡ್ ತಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆದು ಅಂಜನಮೂರ್ತಿ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು. ತದನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ನಾಗರಾಜು ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿವರೆಗೂ ಪಾದಯಾತ್ರೆ ನಡೆಸಿ ಯಾವುದೇ ಕಾರಣಕ್ಕೂ ಈ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟು ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Facebook Comments

Sri Raghav

Admin