ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ : ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

S-Jagadish-Shettar

ಬೆಂಗಳೂರು, ಅ.17– ಶಿವಾಜಿನಗರದ ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಮಾಡಿರುವ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಇದರ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಶಿವಾಜಿನಗರದಂತಹ ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ದುಷ್ಕರ್ಮಿಗಳು ಹತ್ಯೆಗೈದಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆರ್‍ಎಸ್‍ಎಸ್ ಸೇರಿದಂತೆ ಅದರ ಸಹ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಕೆಲ ಸಮಾಜಘಾತುಕ ಶಕ್ತಿಗಳು ಹಲ್ಲೆ ಹಾಗೂ ಕೊಲೆ ಮಾಡುವಂತಹ ದುಷ್ಕøತ್ಯಗಳು ಹೆಚ್ಚಾಗಿವೆ ಎಂದು ದೂರಿದ್ದಾರೆ.

ಈ ಹಿಂದೆ ಮಡಿಕೇರಿಯಲ್ಲಿ ಪುಟ್ಟಪ್ಪ , ಮೈಸೂರಿನಲ್ಲಿ ರಾಜು ಸೇರಿದಂತೆ ಅನೇಕ ಕಡೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕಗ್ಗೊಲೆ ಮಾಡಿದ್ದಾರೆ. ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕೆಂದು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನಗರದಲ್ಲಿ ಮಹಿಳೆಯರ ಮೇಲೆ ಹಲ್ಲೆ ಪ್ರಕರಣ, ಚೈನು ಪ್ರಕರಣಗಳಿಂದ ಜನತೆ ಆತಂಕದಲ್ಲಿದ್ದರು. ಈಗ ಹಾಡಹಗಲೇ ಕಗ್ಗೊಲೆ ನಡೆದಿರುವುದು ಇನ್ನಷ್ಟು ಆತಂಕಕ್ಕೀಡುಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಆರೋಪಿಗಳು ತಲೆಮರೆಸಿಕೊಳ್ಳುವ ಸಾಧ್ಯತೆಯಿದ್ದು, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈಗಾಗಲೇ ಕೊಲೆ ನಡೆದು 24 ಗಂಟೆಯಾಗಿರುವುದರಿಂದ ದುಷ್ಕರ್ಮಿಗಳು ತಲೆಮರೆಸಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕು. ಅಲ್ಲದೆ, ರಾಜ್ಯಸರ್ಕಾರವು ಈ ಪ್ರಕರಣವನ್ನು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಜಗದೀಶ್ ಶೆಟ್ಟರ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin