ಆಸ್ತಿ ವಿವರ ಸಲ್ಲಿಸದ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರಿಗೆ ಲೋಕಾಯುಕ್ತ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

Lokayukta--01

ಬೆಂಗಳೂರು, ಸೆ.9- ನಿಗದಿತ ಅವಧಿಯೊಳಗೆ ತಮ್ಮ ಆಸ್ತಿ ವಿವರ ಸಲ್ಲಿಸದ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಕಳೆದ 6ರಂದು ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ಪತ್ರ ಬರೆದಿರುವ ಲೋಕಾಯುಕ್ತ ನ್ಯಾಯಮೂರ್ತಿಗಳು, 2015-16 ಮತ್ತು 2016-17ರಲ್ಲಿ ಆಸ್ತಿ ವಿವರ ಸಲ್ಲಿಸಲು ಶಾಸಕರಿಗೆ ನೋಟಿಸ್ ನೀಡಲಾಗಿತ್ತು. ಈ ನೋಟಿಸ್‍ಗೆ ಉತ್ತರ ನೀಡದ ಮೂವರು ಜನಪ್ರತಿನಿಧಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಮಾಯಕೊಂಡದ ಕಾಂಗ್ರೆಸ್ ಶಾಸಕ ಕೆ.ಶಿವಮೂರ್ತಿ, ಜೆಡಿಎಸ್‍ನ ವಿಧಾನಪರಿಷತ್ ಸದಸ್ಯ ಆರ್.ಚೌಡರೆಡ್ಡಿ ತೂಪಲ್ಲಿ ಹಾಗೂ ಪಕ್ಷೇತರ ವಿಧಾನಪರಿಷತ್ ಸದಸ್ಯ ಡಿ.ಯು.ಮಲ್ಲಿಕಾರ್ಜುನ ವಿರುದ್ಧ ಕ್ರಮ ಜರುಗಿಸುವಂತೆ ರಾಜ್ಯಪಾಲರಿಗೆ ಕೋರಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಾಯ್ದೆ ಸಕ್ಷನ್ 22(1) ಪ್ರಕಾರ, ಜನಪ್ರತಿನಿಧಿಗಳು ಕಡ್ಡಾಯವಾಗಿ ಪ್ರತೀ ವರ್ಷ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಬೇಕು. ಮುಖ್ಯಮಂತ್ರಿಯಿಂದ ಹಿಡಿದು ಸಚಿವರು, ಲೋಕಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು, ತಮ್ಮ ಕುಟುಂಬದ ಚರ ಮತ್ತು ಸ್ಥಿರಾಸ್ತಿಗಳನ್ನು ಘೋಷಣೆ ಮಾಡಿಕೊಳ್ಳಬೇಕು.

ಒಂದು ವೇಳೆ ನಿಗದಿತ ಅವಧಿಯೊಳಗೆ ಆಸ್ತಿ ವಿವರ ನೀಡದಿದ್ದರೆ ಲೋಕಾಯುಕ್ತರು ನಿಯಮದಂತೆ ನೋಟಿಸ್ ಜಾರಿ ಮಾಡುತ್ತಾರೆ. ಮೂರು ತಿಂಗಳೊಳಗೆ ಆಸ್ತಿ ಘೋಷಣೆ ಮಾಡಿಕೊಳ್ಳದಿದ್ದಾರೆ ಕಾನೂನಿನ ಪ್ರಕಾರ ಅವರ ಸದಸ್ಯತ್ವವನ್ನು ರಾಜ್ಯಪಾಲರು ಅನರ್ಹಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ.
ಇದೀಗ ಮೂವರು ಶಾಸಕರು ಆಸ್ತಿ ವಿವರಗಳನ್ನು ಘೋಷಣೆ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯಪಾಲರು ತಮಗಿರುವ ಪರಮಾಧಿಕಾರವನ್ನು ಬಳಸಿ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬಹುದು.

ಉದ್ದೇಶಪೂರ್ವಕವಾಗಿ ಜನಪ್ರತಿನಿಧಿಗಳು ಆಸ್ತಿ ವಿವರ ಘೋಷಿಸದಿದ್ದಾರೆ ಅಂತಹವರ ಸದಸ್ಯತ್ವವನ್ನು ಅನರ್ಹಗೊಳಿಸಬಹುದು. ಈ ಹಿಂದೆ ಮಧ್ಯಪ್ರದೇಶದಲ್ಲಿ ಸಚಿವರೊಬ್ಬರು ಆಸ್ತಿ ವಿವರ ಘೋಷಣೆ ಮಾಡಿಕೊಂಡಿರಲಿಲ್ಲ.  ಲೋಕಾಯುಕ್ತ ನ್ಯಾಯಮೂರ್ತಿಗಳು ಕ್ರಮ ಜರುಗಿಸುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದರಂತೆ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿತ್ತು. ಬಳಿಕ ನ್ಯಾಯಾಲಯವು ಕೂಡ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿತ್ತು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿಯೊಬ್ಬರು ಹೇಳಿದ್ದಾರೆ. ಈಗ ರಾಜ್ಯಪಾಲರು ತೆಗೆದುಕೊಳ್ಳುವ ಕ್ರಮ ಸಾರ್ವಜನಿಕ ವಲಯದಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

Facebook Comments

Sri Raghav

Admin