ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Shobha--01

ಬೆಂಗಳೂರು,ಸೆ.5-ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಶಾಂತಿಸುವ್ಯವಸ್ಥೆಗಳನ್ನು ಕಾಪಾಡುವ ಶಕ್ತಿಯಿಲ್ಲ. ಹಿಂಸಾಚಾರದಲ್ಲಿ ಭಾಗಿಯಾಗಿರುವವರಿಗೆ ಬೆಂಬಲ ನೀಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ಫ್ರೀಡಂಪಾರ್ಕ್‍ನಲ್ಲಿ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿ ಸಂದರ್ಭ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ರಾಜ್ಯಾದ್ಯಂತ ಬಿಜೆಪಿ ಆರ್‍ಎಸ್‍ಸ್ ಕಾರ್ಯಕರ್ತರನ್ನು ಹತ್ಯೆ ಮಾಡುತ್ತಿರುವ ಪಿಎಫ್‍ಐ, ಕೆಎಫ್‍ಪಿ, ಎಸ್‍ಡಿಎಫ್ ಮುಂತಾದ ಸಂಘಟನೆಗಳನ್ನು ನಿಷೇಧಿಸಬೇಕು. ಆದರೆ ಕಾಂಗ್ರೆಸ್ ಸರ್ಕಾರ ಆ ಸಂಘಟನೆಗಳನ್ನು ರಕ್ಷಿಸುತ್ತಿದೆ ಎಂದು ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದರು.
ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪವಿತ್ರ ವಿಧಾನಸೌಧವನ್ನು ಅಪವಿತ್ರ ಮಾಡಿದೆ. ಈ ಸರ್ಕಾರಕ್ಕೆ ಇನ್ನು ಆರು ತಿಂಗಳಲ್ಲಿ ಅಂತಿಮ ತೆರೆ ಬೀಳಲಿದೆ. ಸರ್ಕಾರ ಏನೇ ಕಸರತ್ತು ಮಾಡಿದರೂ ಮಂಗಳೂರು ಚಲೋ ಕಾರ್ಯಕ್ರಮವನ್ನು ನಾವು ನಡೆಸಿಯೇ ಸಿದ್ಧ ಎಂದು ಅವರು ಹೇಳಿದರು.

ಇದು ಹೇಡಿ ಸರ್ಕಾರ:

ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ, ಇದೊಂದು ಹೇಡಿ ಸರ್ಕಾರ. ಈ ಸರ್ಕಾರದಿಂದ ನಾವು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದರು.  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಈ ರಾಜ್ಯಕ್ಕೆ ಏನನ್ನಾದರೂ ಮಾಡಲು ಸಾಧ್ಯವಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಒಳ್ಳೆಯ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಅಶೋಕ್ ತಿಳಿಸಿದರು.   ರಾಜ್ಯದಲ್ಲಿ ನಡೆದ ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು, ಅರಣ್ಯ ಸಚಿವ ರಮಾನಾಥ ರೈ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಸರ್ಕಾರ ಪೊಲೀಸರನ್ನು ಛೂ ಬಿಟ್ಟು ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin