ಉಪಚುನಾವಣೆ ರಂಗೇರುತ್ತಿರುವ ಬೆನ್ನಲ್ಲೆ ಹೆಚ್ಚಾಯ್ತು ಬೇಲಿ ಹಾರುವವರ ಸಂಖ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

BJP--and-Congress

ಬೆಂಗಳೂರು,ಮಾ.27- ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿರುವ ಬೆನ್ನಲ್ಲೆ ಬೇಲಿ ಹಾರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಾಜಿ ಸಂಸದ ಹಾಗೂ ಚಾಮರಾಜನಗರ ಜಿಲ್ಲೆಯ ಪ್ರಭಾವಿ ದಲಿತ ಮುಖಂಡ ಕಾಗಲವಾಡಿ ಶಿವಣ್ಣ ಇಂದು ಕಾಂಗ್ರೆಸ್‍ಗೆ ಕೈ ಕೊಟ್ಟು ಬಿಜೆಪಿಗೆ ಸೇರ್ಪಡೆಯಾದರು. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಸಂಸದೆ ಶೋಭ ಕರಂದ್ಲಾಜೆ, ಮಾಜಿ ಸಚಿವರಾದ ವಿ.ಸೋಮಣ್ಣ , ಸಿ.ಟಿ.ರವಿ, ಅರವಿಂದ ಲಿಂಬಾವಳಿ ಸೇರಿದಂತೆ ಮತ್ತಿತರ ಸಮ್ಮುಖದಲ್ಲಿ ಕಮಲವನ್ನು ಮುಡಿಗೇರಿಸಿಕೊಂಡರು.

ಶಿವಣ್ಣ ಬಿಜೆಪಿಗೆ ಸೇರಿರುವುದು ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಒಂದಿಷ್ಟು ಬಲ ಬರುವ ಸಾಧ್ಯತೆ ಇದೆ. ಏಕೆಂದರೆ ಈ ಭಾಗದಲ್ಲಿ ದಲಿತ ಸಮುದಾಯಗಳ ಮೇಲೆ ಅವರಿಗೆ ಸಾಕಷ್ಟು ಹಿಡಿತವಿದೆ.  ಎರಡು ದಿನಗಳ ಹಿಂದೆಯಷ್ಟೇ ಸಂಸದೆ ಶೋಭ ಕರಂದ್ಲಾಜೆ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಶಿವಣ್ಣ ಅವರನ್ನು ಆಹ್ವಾನಿಸಿದ್ದರು.   2004ರಲ್ಲಿ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸಂಸತ್ತಿಗೆ ಆಯ್ಕೆಯಾಗಿದ್ದರು. ಅಮೆರಿಕದ ಜೊತೆ ನಾಗರಿಕ ಪರಮಾಣು ಒಪ್ಪಂದ ಮಾಡಿಕೊಂಡಿದ್ದನ್ನು ವಿರೋಧಿಸಿ ಅಂದು ಸಂಸತ್‍ನಲ್ಲಿ ಪ್ರತಿಪಕ್ಷವಾಗಿದ್ದ ಬಿಜೆಪಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿರುದ್ದ ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು.

ಜೆಡಿಎಸ್‍ನಿಂದ ಆಯ್ಕೆಯಾಗಿದ್ದರೂ ಶಿವಣ್ಣ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದರು. 2009ರ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರದಿಂದ ಟಿಕೆಟ್ ನೀಡುವ ಆಶ್ವಾಸನೆಯನ್ನು ಕೊಡಲಾಗಿತ್ತು. ಆದರೆ ಅಂದು ಸಿದ್ದರಾಮಯ್ಯ ತಮ್ಮ ಬೆಂಬಲಿಗ ಆರ್.ಕೆ.ಧ್ರುವನಾರಾಯಣ್ ಅವರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರಿಂದ ಶಿವಣ್ಣನವರಿಗೆ ಟಿಕೆಟ್ ಕೈತಪ್ಪಿತ್ತು.   ಕೇಂದ್ರದ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿದ್ದ ಶಿವಣ್ಣ ಕಾಂಗ್ರೆಸ್‍ನಲ್ಲಿ ಮೂಲೆಗುಂಪಾಗಿದ್ದರು. ಇದೀಗ ಬಿಜೆಪಿ ಸೇರ್ಪಡೆಯಾಗಿರುವುದರಿಂದ 2019ರ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಹುರಿಯಾಳಾಗುವ ಸಾಧ್ಯತೆ ಇದೆ.

ಈ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಪರಾಭವಗೊಂಡಿದ್ದ ಎ.ಆರ್.ಕೃಷ್ಣಮೂರ್ತಿ ಮುಂದಿನ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದರಿಂದ ಶಿವಣ್ಣ ಅಖಾಡಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin