ಎಲೆಕ್ಷನ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಿಮಿನಲ್‍ಗಳ ಮೇಲೆ ನಿಗಾ ಇಡಲು ಪೊಲೀಸರಿಗೆ ರೆಡ್ಡಿ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Ramalingaredy--01

ಬೆಂಗಳೂರು, ಜ.27- ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸುವ ಶಕ್ತಿಗಳ ಮೇಲೆ ತೀವ್ರ ನಿಗಾ ಇಡಬೇಕು. ಕ್ರಿಮಿನಲ್‍ಗಳನ್ನು ಎಡೆಮುರಿ ಕಟ್ಟಬೇಕು. ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿಯವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರು, ಹೆಚ್ಚುವರಿ ಆಯುಕ್ತರು, ಎಂಟು ವಿಭಾಗಗಳ ಡಿಸಿಪಿಗಳು, ಎಸಿಪಿಗಳು, ಇನ್ಸ್‍ಪೆಕ್ಟರ್‍ಗಳು, ಹಾಗೂ ಸಂಚಾರಿ ವಿಭಾಗದ ಹೆಚ್ಚುವರಿ ಆಯುಕ್ತರು ಮತ್ತು ಸೈಬರ್ ಕ್ರೈಮ್ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಿದ ಗೃಹ ಸಚಿವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಆದರೆ, ಪೊಲೀಸರ ಮೇಲೆ ಹಲ್ಲೆ ನಡೆಯುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಚುನಾವಣೆ ಸಂದರ್ಭದಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಸರ ಅಪಹರಣ, ದರೋಡೆ, ರೌಡಿಗಳ ಉಪಟಳ, ಮಹಿಳೆಯರ ಮೇಲಿನ ದೌರ್ಜನ್ಯ, ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು ನಗರದಲ್ಲಿ ನಡೆಯುತ್ತಿದ್ದು, ಪೊಲೀಸರು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಪಡೆದ ಗೃಹ ಸಚಿವರು, ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ ನೀಡಿದರು. ಇಷ್ಟೆಲ್ಲ ಘಟನೆಗಳು ನಡೆದರೂ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಅಪರಾಧ ಚಟುವಟಿಕೆಗಳನ್ನು ನಡೆಸುವವರ ಮೇಲೆ ನಿಗಾ ಇಟ್ಟು ಕೂಡಲೇ ಅವುಗಳನ್ನು ನಿಯಂತ್ರಿಸುವಂತೆ ಹೇಳಿದರು.

ರಾಜ್ಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದೆ. ನೀವು ಜವಾಬ್ದಾರಿಯುತವಾಗಿ ಕೆಲಸ ಮಾಡಿ ಎಂದು ಅವರು ಅಧಿಕಾರಿಗಳಿಗೆ ಆದೇಶಿಸಿದರು.  ಗೃಹ ಸಚಿವರಾದ ಮೊದಲನೆ ವಾರದಲ್ಲಿ ಕಾನೂನು-ಸುವ್ಯವಸ್ಥೆ ಸಂಬಂಧ 20 ಅಂಶಗಳ ಸಲಹೆಯನ್ನು ರಾಮಲಿಂಗಾರೆಡ್ಡಿಯವರು ಪೊಲೀಸರಿಗೆ ನೀಡಿದ್ದರು. ಇಂದು ನಡೆದ ಸಭೆಯಲ್ಲಿ 30 ಅಂಶಗಳನ್ನೊಳಗೊಂಡ ಮಾರ್ಗಸೂಚಿಗಳನ್ನು ನೀಡಿದರು.  ಕಾನೂನು-ಸುವ್ಯವಸ್ಥೆ ಉತ್ತಮವಾಗಿರಬೇಕು. ಪೊಲೀಸರ ಮೇಲೆ ವಿಶ್ವಾಸ ಮೂಡುವಂತಿರಬೇಕು. ಪೊಲೀಸರು ಜನಸ್ನೇಹಿಯಾಗಿರಬೇಕು. ಕ್ರಿಮಿನಲ್‍ಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದೂ ಸೇರಿದಂತೆ 30 ಅಂಶಗಳ ಕಾರ್ಯಸೂಚಿಯನ್ನು ಪೊಲೀಸರಿಗೆ ನೀಡಿದರು.  ಇಂದಿನಿಂದಲೇ ಸಮರೋಪಾದಿಯಲ್ಲಿ ಕಾರ್ಯೋನ್ಮುಖರಾಗಿ ಕಾನೂನು-ಸುವ್ಯವಸ್ಥೆ ಕಾಪಾಡಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಇಲಾಖೆಗೆ, ರಾಜ್ಯಕ್ಕೆ, ಸರ್ಕಾರಕ್ಕೆ ಹೆಸರು ತರಬೇಕೆಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin