ಕುಡಿಯುವ ನೀರಿಗೆ ಶಾಶ್ವತ ಪರಿಹಾರ

ಈ ಸುದ್ದಿಯನ್ನು ಶೇರ್ ಮಾಡಿ

kr--ramesh--kumar

ಕೋಲಾರ, ಆ.16-ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಎತ್ತಿಹೊಳೆ ಯೋಜನೆಯನ್ನು ರಾಜ್ಯ ಸರ್ಕಾರವು 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದ್ದು 2 ವರ್ಷದೊಳಗೆ ಜಿಲ್ಲೆಯ ಕೆರೆಗಳಿಗೆ ನೀರುಣಿಸಲು ಸಾಧ್ಯವಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು.ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ಅವರು, ನೀರಿನ ಸಮಸ್ಯೆಯನ್ನು ನೀಗಿಸಲು ರಾಜ್ಯ ಸರ್ಕಾರವು ದೃಢಸಂಕಲ್ಪ ಕೈಗೊಂಡಿದ್ದು ಬೆಂಗಳೂರಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕೋರಮಂಗಲ ಚಲ್ಲಘಟ್ಟ ಯೋಜನೆಗೆ ಚಾಲನೆ ನೀಡಲಾಗಿದ್ದು 2017 ರ ಆ.15 ರೊಳಗೆ ಇದನ್ನು ಪೂರ್ಣಗೊಳಿಸುವ ನಿರೀಕ್ಷೆ ಇದೆ ಎಂದರು.
ಈ ಯೋಜನೆ ವ್ಯಾಪ್ತಿಯ ಕೆರೆಗಳಲ್ಲಿ ಬೆಳೆದಿರುವ ಜಾಲಿ ಗಿಡಗಳನ್ನು ತೆರವುಗೊಳಿಸಿ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಹರಿಸಲು ಕೆರೆಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಶೀಘ್ರವೇ ಆರೋಗ್ಯ ನೀತಿ ರೂಪಿಸಿ ಜಾರಿಗೆ ತರಲಿದೆ. ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿರುವಂತೆ ಕ್ರಮ ವಹಿಸಲಾಗುವುದು ಎಂದ ಸಚಿವರು, ಕೋಲಾರ ಜಿಲ್ಲೆಯಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ತಿಳಿಸಿದರು.
ಜಿಲ್ಲೆಯ ತೀವ್ರ ಕುಡಿಯುವ ನೀರಿನ ಸಮಸ್ಯೆ ಹಿನ್ನಲೆಯಲ್ಲಿ ಕನಿಷ್ಠ 500 ಜನಸಂಖ್ಯೆ ಇರುವ ಎಲ್ಲಾ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಸರ್ಕಾರ ಮಂಜೂರಾತಿ ನೀಡಿದೆ. 2017 ರ ಮಾರ್ಚ್ ತಿಂಗಳೊಳಗೆ ಇವುಗಳನ್ನು ಸ್ಥಾಪಿಸಲಾಗುವುದು. ಕೋಲಾರ ಜಿಲ್ಲೆಗೆ ಮಂಜೂರಾಗಿರುವ ರೈಲ್ವೆ ಕೋಚ್ ಫ್ಯಾಕ್ಟರಿ ಸ್ಥಾಪನೆಗೆ 1200 ಎಕರೆ ಭೂಮಿ ಗುರುತಿಸಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜನವರಿ ತಿಂಗಳಲ್ಲಿ ಭೂಮಿಯನ್ನು ರೈಲ್ವೇ ಇಲಾಖೆಗೆ ಹಸ್ತಾಂತರಿಸಲಾಗುವುದು. ಸಮಾರಂಭದಲ್ಲಿ ಸಂಸದ ಕೆ.ಹೆಚ್.ಮುನಿಯಪ್ಪ, ಜಿಲ್ಲಾಪಂಚಾಯತಿ ಅಧ್ಯಕ್ಷೆ ಗೀತಾ ಆನಂದರೆಡ್ಡಿ, ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ, ಜಿಪಂ ಸಿಇಒ ಬಿ.ಬಿ.ಕಾವೇರಿ, ಎಸ್ಪಿ ಡಾ.ದಿವ್ಯಾ, ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಉಪ ವಿಭಾಗಾಧಿಕಾರಿ ಮಂಜುನಾಥ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin