ಕೆ.ಜೆ.ಜಾರ್ಜ್ ಗೆ ಮತ್ತೆ ಮಂತ್ರಿಗಿರಿ..?

ಈ ಸುದ್ದಿಯನ್ನು ಶೇರ್ ಮಾಡಿ

K.J.George

ಬೆಂಗಳೂರು, ಆ.23-ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್ ಅವರನ್ನು ಸದ್ಯದಲ್ಲೇ ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಇವರ ಜೊತೆ ಎಂ.ಕೃಷ್ಣಪ್ಪ ಅವರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ದಸರಾ ವೇಳೆಗೆ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.  ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಜಾರ್ಜ್ ಅವರ ಮೇಲೆ ಆರೋಪ ಸಾಬೀತು ಪಡಿಸುವಂತಹ ಲಿಖಿತ ರೂಪದ ಯಾವುದೇ ದಾಖಲೆಗಳು ಸಿಕ್ಕಿಲ್ಲ ಎಂಬ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಐಡಿ ಈಗಾಗಲೇ ಕ್ಲೀನ್ ಚಿಟ್ ನೀಡಿದ್ದು, ಪ್ರಕರಣ ಸಂಬಂಧ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮಾಜಿ ಸಚಿವ ಜಾರ್ಜ್ ಅವರ ಮೇಲಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಸಲ್ಲಿಸಲಿದ್ದಾರೆ.

ಕಾನೂನು ಪ್ರಕ್ರಿಯೆಗಳು ಮುಗಿದ ಮೇಲೆ ಜಾರ್ಜ್ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇವರು ನಿರ್ವಹಿಸುತ್ತಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆ ಸದ್ಯ ಮುಖ್ಯಮಂತ್ರಿಗಳ ಬಳಿಯೇ ಇದೆ. ಅದೇ ಖಾತೆಯನ್ನು ಮುಖ್ಯಮಂತ್ರಿಗಳು ಅವರಿಗೆ ವಹಿಸುವ ಸಾಧ್ಯತೆ ಇದೆ.  ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸ್ವಲ್ಪದರಲ್ಲೇ ಹುದ್ದೆ ಕೈ ತಪ್ಪಿದ್ದ ಎಂ.ಕೃಷ್ಣಪ್ಪ ಅವರಿಗೂ ಈ ಬಾರಿ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. ಜಾರ್ಜ್ ಹಾಗೂ ಎಂ.ಕೃಷ್ಣಪ್ಪ ಅವರು ದಸರಾ ಉದ್ಘಾಟನೆಗೂ ಮುನ್ನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿದ್ದ ಜಾರ್ಜ್ ಅವರ ಹೆಸರನ್ನು ಉಲ್ಲೇಖಿಸಿದ್ದರು. ಅಲ್ಲದೆ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ ಹಾಗೂ ಪ್ರಸಾದ್ ಅವರ ಹೆಸರನ್ನು ಸಹ ಪ್ರಸ್ತಾಪಿಸಿದ್ದರು.  ಪ್ರತಿಪಕ್ಷಗಳ ಪ್ರತಿಭಟನೆ, ಸಾರ್ವಜನಿಕರ ಪ್ರತಿರೋಧದ ಹಿನ್ನೆಲೆಯಲ್ಲಿ ಜಾರ್ಜ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.  ಇಬ್ಬರು ಅಧಿಕಾರಿಗಳನ್ನು ದೀರ್ಘ ಕಾಲದ ರಜೆ ಮೇಲೆ ಕಳುಹಿಸಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ತನಿಖೆ ನಡೆಸಿರುವ ಸಿಐಡಿ ತಂಡ ಮೂವರಿಗೂ ಕ್ಲೀನ್ ಚಿಟ್ ನೀಡಿರುವುದು ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಜಾರ್ಜ್ ಅವರು ಮತ್ತೆ ಸಂಪುಟ ಸೇರಲಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin