ಕೇಂದ್ರದ ಗೋ ಹತ್ಯೆ ನಿಷೇಧ ಕಾಯ್ದೆ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ನಿರ್ಧಾರ..?
ಬೆಂಗಳೂರು,ಮೇ 30- ಹಲವರ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಜಾರಿ ಮಾಡಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಳೆದ ವಾರ ಕೇಂದ್ರ ಸರ್ಕಾರದ ಪರಿಸರ ಇಲಾಖೆ ಹೊರಡಿಸಿದ್ದ ಪ್ರಾಣಿ ಹಿಂಸೆ ( ಜಾನುವಾರು ಮಾರುಕಟ್ಟೆ ನಿಯಂತ್ರಣ) ಕಾಯ್ದೆ ಪ್ರಕಾರ ದೇಶಾದ್ಯಂತ ಮಾಂಸಕ್ಕಾಗಿ ಗೋ ಮಾರಾಟ ಮಾಡುವುದನ್ನು ನಿಷೇಧ ಮಾಡಿ ಅಧಿಸೂಚನೆ ಹೊರಡಿಸಿತ್ತು.
ಈಗಾಗಲೇ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಪರ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳು ಈ ಕಾಯ್ದೆಯನ್ನು ಸ್ವಾಗತಿಸಿದ್ದರೆ ಬಿಜೇಪಿಯೇತರ ರಾಜ್ಯಗಳು ಗೋ ಮಾಂಸ ನಿಷೇಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.
ಕರ್ನಾಟಕದಲ್ಲೂ ಪರ- ವಿರೋಧ ಕೇಳಿ ಬಂದಿದ್ದರೂ ಅಂತಿಮವಾಗಿ ಕೇಂದ್ರ ಸರ್ಕಾರದ ಆದೇಶವನ್ನು ಯಥಾವತ್ತಾಗಿ ಅನುಷ್ಠಾನ ಮಾಡಲು ಮೂರು ತಿಂಗಳು ಕಾಲಾವಕಾಶ ಕೊಡಲಾಗಿದೆ. ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಯಾವುದೇ ಕಾರಣಕ್ಕೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಅನುಷ್ಠಾನಕ್ಕೆ ತರಬಾರದು ಎಂದು ಹೈಕಮಾಂಡ್ ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕಾಯ್ದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಈಗಾಗಲೇ ಸಂವಿಧಾನ ತಜ್ಞರು , ಅಡ್ವೋಕೇಟ್ ಜನರಲ್ ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಕಾಯ್ದೆ ಅನುಷ್ಠಾನ ಮಾಡುವ ಮುನ್ನ ರಾಜ್ಯ ಸರ್ಕಾರಗಳ ಜೊತೆ ಚರ್ಚಿಸದೆ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡಿದೆ. ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೇಂದ್ರ ಜಾರಿಗೆ ಮಾಡಿದ್ದರೂ ಅಂತಿಮವಾಗಿ ಇದನ್ನು ಅನುಷ್ಠಾನ ಮಾಡುವ ಹೊಣೆಗಾರಿಕೆ ರಾಜ್ಯ ಸರ್ಕಾರಗಳಿಗೆ ಸೇರಿರುತ್ತದೆ.
ಸುಪ್ರೀಂಕೋರ್ಟ್ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು , ಕೇಂದ್ರದ ಯಾವುದೇ ಕಾಯ್ದೆಗಳನ್ನು ಬಲವಂತವಾಗಿ ರಾಜ್ಯ ಸರ್ಕಾರಗಳ ಮೇಲೆ ಹೇರಬಾರದೆಂದು ಆದೇಶ ನೀಡಿದೆ.
ಈ ಆದೇಶವನ್ನೇ ಅಸ್ತ್ರವಾಗಿಟ್ಟುಕೊಂಡಿರುವ ರಾಜ್ಯ ಸರ್ಕಾರದ ಉದ್ದೇಶಿತ ಕಾಯ್ದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈಗಾಗಲೇ ಕೇಂದ್ರದ ಈ ಕಾಯ್ದೆಯನ್ನು ಕೇರಳ, ಪಶ್ಚಿಮ ಬಂಗಾಳ, ಮೇಘಾಲಯ ಸೇರಿದಂತೆ ಹಲವು ರಾಜ್ಯಗಳು ವಿರೋಧಿಸಿವೆ. ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ನಮ್ಮ ನಮ್ಮ ರಾಜ್ಯಗಳಲ್ಲಿ ಅನುಷ್ಠಾನ ಮಾಡುವುದಿಲ್ಲ ಎಂದು ಸಡ್ಡು ಹೊಡೆದಿವೆ.
ಇದೀಗ ರಾಜ್ಯ ಸರ್ಕಾರವು ಇದೇ ಹಾದಿ ತುಳಿಯಲಿದ್ದು , ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಅಲ್ಪಸಂಖ್ಯಾತರ ಭಯ:
ಕಾಯ್ದೆಯನ್ನು ಅನುಷ್ಠಾನ ಮಾಡಿದರೆ ಪಕ್ಷ ಅತಿಯಾಗಿ ನಂಬಿಕೊಂಡಿರುವ ಅಲ್ಪಸಂಖ್ಯಾತ ಮತಗಳು ಕೈ ಕೊಡಬಹುದು ಎಂಬ ಭೀತಿ ಆಡಳಿತ ಪಕ್ಷಕ್ಕೆ ಕಾಡುತ್ತಿದೆ. ಬಿಜೆಪಿ ಇದರ ಲಾಭ ಪಡೆದುಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ನಿರ್ಣಾಯಕವಾಗಿರುವ ಅಲ್ಪಸಂಖ್ಯಾತರು ಮುನಿಸಿಕೊಂಡರೆ ಪಕ್ಷಕ್ಕೆ ಹಿನ್ನೆಡೆಯಾಗುತ್ತದೆ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ. ಗೋವಿನ ಜೊತೆ ಎತ್ತು, ಎಮ್ಮೆ ಹಾಗೂ ಒಂಟೆ ಮಾರಾಟಕ್ಕೂ ಈ ನಿಯಮ ಅನ್ವಯವಾಗಲಿದೆ. ಅಲ್ಪಸಂಖ್ಯಾತರು ಇದರ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರಲ್ಲದೆ ಅವರ ವ್ಯಾಪಾರ ವಹಿವಾಟಿಗೂ ಹೊಡೆತ ಬೀಳುವ ಸಾಧ್ಯತೆಗಳು ಹೆಚ್ಚಾಗಿವೆ.
ಕೃಷಿ ಉದ್ದೇಶಿತ ಚಟುವಟಿಕೆಗಳಿಗೆ ಗೋವುಗಳನ್ನು ಖರೀದಿಸಬಹುದು. ಆದರೆ ಮಾಂಸಕ್ಕಾಗಿ ಮಾತ್ರ ಖರೀದಿಸುವುದಾಗಲಿ ಇಲ್ಲವೇ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧ ಎಂಬುದು ಕಾಯ್ದೆಯಲ್ಲಿದೆ.
ಈ ಎಲ್ಲ ಸಾಧಕ ಬಾಧಕಗಳನ್ನು ಅವಲೋಕಿಸಿರುವ ರಾಜ್ಯ ಸರ್ಕಾರ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ತಡೆ ಹಿಡಿದು ನ್ಯಾಯಾಲಯದಲ್ಲಿ ಕಾನೂನು ಸಮರ ಸಾರಲು ಮುಂದಾಗಿವೆ. ಇನ್ನು ಜೆಡಿಎಸ್ ಕೂಡ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕಾಯ್ದೆ ಅನುಷ್ಠಾನ ಸಾಧ್ಯವಿಲ್ಲ ಎಂಬ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮಾತುಕತೆ ನಡೆಸುತ್ತೇನೆ ಎಂದಿದ್ದಾರಲ್ಲದೆ ಸಂಸತ್ನಲ್ಲಿ ಚರ್ಚಿಸುವುದಾಗಿಯೂ ಹೇಳಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಉದ್ದೇಶಿತ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಿಫಲಗೊಳಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಕಸರತ್ತು ನಡೆಸಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS